ಬಳ್ಳಾರಿ: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ವಿಶ್ಲೇಷಿಸಿ ಸಮೀರ್ ಎಂಬುವರು ಸಾಮಾಜಿಕ ಮಾಧ್ಯಮ ಯೂಟ್ಯೂಬ್‌ನಲ್ಲಿ ವಿಡಿಯೊ ಹಂಚಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
‘ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)–2023ರ ಸೆಕ್ಷೆನ್ 299’ (ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆಗಳನ್ನು ಉದ್ದೇಶಪೂರ್ವಕವಾಗಿ ಅಪಮಾನಿಸುವುದು) ಅಡಿಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ.
‘ದೂತ: ಸಮೀರ್ ಎಂಡಿ/ದೂತ’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಹೊರಡಿಸಲಾದ ವಿಡಿಯೊದಿಂದ ಜನರು ಹೊಂದಿರುವ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
‘ಪ್ರಕರಣ ದಾಖಲಾಗಿದ್ದು, ಪೊಲೀಸ್ ಇಲಾಖೆಯಿಂದ ನೋಟಿಸ್ ಕೂಡ ಕೊಡಲಾಗಿದ್ದು, ಸಮೀರ್ ವಿಚಾರಣೆಗೆ ಹಾಜರಾಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದರು.
ಸಮೀರ್ ಬಂಧನಕ್ಕೆ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದಲ್ಲಿ ಹಾಕಲಾಗಿರುವ ಸೆಕ್ಷನ್‌ಗಳ ಪ್ರಕಾರ. ಬಂಧನಕ್ಕೆ ಅವಕಾಶ ಇಲ್ಲ’ ಎಂದರು.
ಯೂಟ್ಯೂಬರ್ ಸಮೀರ್ ಮೂಲತಃ ಬಳ್ಳಾರಿಯ ಬಂಡಿಹಟ್ಟಿಯವರು. ಅವರ ತಾಯಿ ಆಂಧ್ರ ಪ್ರದೇಶದ ಗುಂತಕಲ್‌ನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ. ಸಮೀರ್ ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ ಎಂಬ ಮಾಹಿತಿ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.