ADVERTISEMENT

ಬಳ್ಳಾರಿ | ಬಾಲ್ಯ ವಿವಾಹ, ಪೋಕ್ಸೊ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 7:23 IST
Last Updated 18 ಜುಲೈ 2025, 7:23 IST
ಪ್ರಶಾಂತ್‌ ಕುಮಾರ್‌ ಮಿಶ್ರಾ
ಪ್ರಶಾಂತ್‌ ಕುಮಾರ್‌ ಮಿಶ್ರಾ   

ಬಳ್ಳಾರಿ: ‘ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು’ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪೊಲೀಸ್ ಇಲಾಖೆಯಿಂದ ಗ್ರಾಮ ಸಭೆಗಳಲ್ಲಿ, ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿಯೂ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು’ ಎಂದು ತಿಳಿಸಿದರು.

ADVERTISEMENT

‘ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಇತರೆ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಇಲಾಖೆಗಳು ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು. 

‘ಜಿಲ್ಲೆಯಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಬೇಕು. ಲಿಂಗಾನುಪಾತ ಕಡಿಮೆ ಇರುವ ತಾಲೂಕು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

‘ಜಿಲ್ಲೆಯಲ್ಲಿ 6 ವರ್ಷದೊಳಗಿನ ಮಕ್ಕಳ ಕುಂಠಿತ ಬೆಳವಣಿಗೆ, ತೂಕ ನಿಯಂತ್ರಣ ಅಪೌಷ್ಠಿಕತೆ, ರಕ್ತಹೀನತೆ ತಡೆಗಟ್ಟುವಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ ಯೋಜನೆ ಜಾರಿಯಲ್ಲಿದೆ. ಫಲಾನುಭವಿಗಳನ್ನು ಗುರುತಿಸಿ ಪೋಷಣ್ ಟ್ರ್ಯಾಕರ್‌ ತಂತ್ರಾಂಶದಲ್ಲಿ ಆಧಾರ್ ಸೀಡಿಂಗ್ ಮಾಹಿತಿಯನ್ನು ತಪ್ಪಿಲ್ಲದಂತೆ ನಮೂದಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅನಾಥ, ನಿರ್ಗತಿಕ, ಪೊಲೀಸ್‌ರಿಂದ ಅಭಿರಕ್ಷಣೆಗಾಗಿ ದಾಖಲಾದ ಮಹಿಳೆಯರು ಆಶ್ರಯ ಪಡೆಯಲು ಜಿಲ್ಲೆಯಲ್ಲಿ ರಾಜ್ಯ ಮಹಿಳಾ ನಿಲಯವಿದೆ. ಅವರ ಆರೈಕೆಗಾಗಿ ಸಿಬ್ಬಂದಿಗಳ ಕೊರತೆಯಿದ್ದಲ್ಲಿ ಸಂಬಂಧಿಸಿದ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆಯಬೇಕು’ ಎಂದು ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ದೌಜನ್ಯಕ್ಕೊಳಗಾದ ಮಹಿಳೆಯರನ್ನು ರಕ್ಷಿಸಲು ಜಿಲ್ಲಾ ಮಟ್ಟದಲ್ಲಿ ಸಂರಕ್ಷಣಾಧಿಕಾರಿಯನ್ನು ನೇಮಿಸಲಾಗಿದೆ. ಮಹಿಳೆಯರ ಉಚಿತ ಸಹಾಯವಾಣಿ ಸಂಖ್ಯೆ 181ನ್ನು ಗ್ರಾಮಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ಹೆಚ್ಚಾಗಿ ಪ್ರಚಾರ ಮಾಡಬೇಕು’ ಎಂದರು ತಿಳಿಸಿದರು.

ಸಭೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಬಾಲಕಿಯರ ವಸತಿ ನಿಲಯ, ದಮನಿತ ಮಹಿಳೆಯರ, ಲೈಂಗಿಕ ಅಲ್ಪಸಂಖ್ಯಾತರ, ಸಾಂತ್ವನ ಕೇಂದ್ರಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜರುಗಿತು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಡಿಎಸ್‌ಪಿ ಚಂದ್ರಕಾಂತ ನಂದಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಮಹಿಳೆಯರ ಮತ್ತು ಮಕ್ಕಳ ಸಾಗಾಟ ಕೌಟುಂಬಿಕ ದೌರ್ಜನ್ಯ ಬಾಲ್ಯವಿವಾಹ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು
ಪ್ರಶಾಂತ್‌ ಕುಮಾರ್‌ ಮಿಶ್ರ ಜಿಲ್ಲಾಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.