ADVERTISEMENT

₹10,000 ನಗದು ಪರಿಹಾರಕ್ಕೆಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 12:08 IST
Last Updated 5 ಜುಲೈ 2021, 12:08 IST
ಕಟ್ಟಡ ನಿರ್ಮಾಣ ಕಾರ್ಮಿಕರು ಸೋಮವಾರ ಹೊಸಪೇಟೆಯ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕಟ್ಟಡ ನಿರ್ಮಾಣ ಕಾರ್ಮಿಕರು ಸೋಮವಾರ ಹೊಸಪೇಟೆಯ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರ ₹10,000 ನಗದು ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ನಿಂದ ಸೋಮವಾರ ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಫೆಡರೇಶನ್‌ ನೇತೃತ್ವದಲ್ಲಿ ನೂರಾರು ಕಾರ್ಮಿಕರು ನಗರದ ಶ್ರಮಿಕ ಭವನದಿಂದ ಕಾರ್ಮಿಕ ಇಲಾಖೆಯ ಕಚೇರಿ ವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಹೆಸರಿಗೆ ಬರೆದ ಮನವಿ ಪತ್ರವನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗೆ ಸಲ್ಲಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಮಿಕರಿಗೆ ಇದುವರೆಗೆ ಸಮರ್ಪಕವಾಗಿ ಆಹಾರ ಕಿಟ್‌ ವಿತರಿಸಿಲ್ಲ. ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಅದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ನೊಂದ ಕಾರ್ಮಿಕರಿಗೆ ಆಹಾರ ಕಿಟ್‌ ಬದಲು ₹10,000 ನಗದು ಅವರ ಖಾತೆಗೆ ಜಮೆ ಮಾಡಬೇಕು. ಕಲ್ಯಾಣ ಮಂಡಳಿಯ ಕಟ್ಟಡ ಕಾರ್ಮಿಕರ ನಿಧಿ ಸರ್ಕಾರಿ ಯೋಜನೆ ಅಥವಾ ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಆಗ್ರಹಿಸಿದರು.

ಫೆಡರೇಶನ್‌ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಎಂ. ಗೋಪಾಲ್‌, ಕಾರ್ಯದರ್ಶಿ ಕೆ. ರಾಮಾಂಜಿನಿ, ತಾಲ್ಲೂಕು ಖಜಾಂಚಿ ಬೀಯಮ್ಮ, ಕಟ್ಟಡ ನಿರ್ಮಾಣ ಕಾರ್ಮಿಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.