ADVERTISEMENT

ಕೋವಿಡ್‌ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಲಸಿಕೆ ಕಾರಣ ಅಲ್ಲ ಎಂದ ಸುಧಾಕರ್

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 15:04 IST
Last Updated 18 ಜನವರಿ 2021, 15:04 IST
ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ ಬಾಳಪ್ಪ
ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ ಬಾಳಪ್ಪ   

ಸಂಡೂರು: ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ ಬಾಳಪ್ಪ(43) ಸೋಮವಾರ ಬೆಳಿಗ್ಗೆ ತಾಲ್ಲೂಕಿನ ತೋರಣಗಲ್ಲಿನ ಸಂಜೀವಿನಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರು ಶನಿವಾರ ಕೋವಿಶೀಲ್ಡ್ ಲಸಿಕೆ ಪಡೆದಿದ್ದರು. ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.

‘ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲಾಗಿದೆ. ವರದಿ ನಂತರವೇ ನಾಗರಾಜ ಅವರ ನಿಧನಕ್ಕೆ ನಿರ್ದಿಷ್ಟ ಕಾರಣ ತಿಳಿಯಲಿದೆ’ ಎಂದು ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ರಾಮಶೆಟ್ಟಿ ತಿಳಿಸಿದರು.

ADVERTISEMENT

ಸಂಡೂರಿನ ವ್ಯಕ್ತಿ ಕೋವಿಡ್ ಲಸಿಕೆಯಿಂದ ಮೃತಪಟ್ಟಿಲ್ಲ: ಡಾ.ಕೆ. ಸುಧಾಕರ್

‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತರಾದರು ಎನ್ನುವುದು ವದಂತಿಯಷ್ಟೆ. ಅವರಿಗೆ ಮಧುಮೇಹ ನ್ಯೂನತೆ ಇತ್ತು. ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

‘ಕೋವಿಡ್ ಲಸಿಕೆ ಪಡೆದ ಬಳಿಕ ಅವರಿಗೆ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ. ಲಸಿಕೆಯ ಅಡ್ಡ ಪರಿಣಾಮದಿಂದ ಹೀಗಾಗಿದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.