ADVERTISEMENT

ಕೃಷಿ ಸಚಿವರ ಭಾವಚಿತ್ರ ಸುಟ್ಟು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 11:27 IST
Last Updated 27 ಜನವರಿ 2021, 11:27 IST
ರೈತರನ್ನು ಭಯೋತ್ಪಾದಕರು ಎಂದಿರುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರ ಭಾವಚಿತ್ರ ಸುಟ್ಟು ಸಿಪಿಎಂ ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು
ರೈತರನ್ನು ಭಯೋತ್ಪಾದಕರು ಎಂದಿರುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರ ಭಾವಚಿತ್ರ ಸುಟ್ಟು ಸಿಪಿಎಂ ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು   

ಹೊಸಪೇಟೆ: ಕೆಂಪುಕೋಟೆ ಬಳಿ ಪ್ರತಿಭಟನೆ ನಡೆಸಿದ ರೈತರು ಭಯೋತ್ಪಾದಕರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರು ಬುಧವಾರ ನಗರದಲ್ಲಿ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

‘ರೈತ ವಿರೋಧಿ ಬಿ.ಸಿ. ಪಾಟೀಲಗೆ ಧಿಕ್ಕಾರ’, ‘ರೈತರ ಹೋರಾಟಕ್ಕೆ ಜಯವಾಗಲಿ’ ಎಂದು ಘೋಷಣೆಗಳನ್ನು ಕೂಗಿದರು.

ಬಳಿಕ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಸವರಾಜ, ‘ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು ಎರಡು ತಿಂಗಳಿಂದ ಕೊರೆಯುವ ಚಳಿ ಲೆಕ್ಕಿಸದೆ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿಲ್ಲ. ಅವರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸಿತು. ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪೆರೇಡ್‌ ಸಂದರ್ಭದಲ್ಲಿ ಪೊಲೀಸರು ಹಾಗೂ ರೈತರಿಂದ ಕೆಲವು ಸಣ್ಣಪುಟ್ಟ ಘಟನೆಗಳು ಜರುಗಿವೆ. ಹಾಗಂತ ರೈತರೆಲ್ಲ ಭಯೋತ್ಪಾದಕರಲ್ಲ. ಕೃಷಿ ಸಚಿವರು ಅನ್ನದಾತರ ಬಗ್ಗೆ ಹಗುರವಾಗಿ ಹೇಳಿಕೆ ಕೊಡಬಾರದು’ ಎಂದು ಆಗ್ರಹಿಸಿದರು.

ADVERTISEMENT

‘ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ರೈತರ ಮೇಲೆ ಗೂಬೆ ಕೂರಿಸುತ್ತಿದೆ’ ಎಂದು ಆರೋಪಿಸಿದರು.

ಮುಖಂಡರಾದ ಮರಡಿ ಜಂಬಯ್ಯ ನಾಯಕ, ಆರ್‌. ಭಾಸ್ಕರ್‌ ರೆಡ್ಡಿ, ಶಿವಕುಮಾರ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.