ADVERTISEMENT

ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 12:34 IST
Last Updated 5 ಸೆಪ್ಟೆಂಬರ್ 2019, 12:34 IST
ಸಿ.ಐ.ಟಿ.ಯು. ಕಾರ್ಯಕರ್ತರು ಗುರುವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಸಿ.ಐ.ಟಿ.ಯು. ಕಾರ್ಯಕರ್ತರು ಗುರುವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ₹18,000 ವೇತನ ನಿಗದಿಪಡಿಸಬೇಕೆಂದು ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿ.ಐ.ಟಿ.ಯು.) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರಮಿಕ ಭವನದಿಂದ ಪ್ರಮುಖ ಮಾರ್ಗಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ನಂತರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

2016ರ ಬೆಲೆ ಸೂಚ್ಯಂಕವನ್ನು ಆಧರಿಸಿ ಕಾರ್ಮಿಕರಿಗೆ ಸರ್ಕಾರ ಕನಿಷ್ಠ ₹18,000 ವೇತನ ಕೊಡಬೇಕೆಂದು ತಿಳಿಸಲಾಗಿದೆ. ಹೀಗಿದ್ದರೂ ಸರ್ಕಾರ ಅದನ್ನು ಜಾರಿಗೆ ತಂದಿಲ್ಲ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇದರಿಂದ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಕೂಡಲೇ ಕನಿಷ್ಠ ಸಂಬಳ ನಿಗದಿಪಡಿಸಿ ಜಾರಿಗೆ ತರಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ADVERTISEMENT

ರಾಜ್ಯ, ಕೇಂದ್ರ ಸರ್ಕಾರ ಖಾಲಿಯಿರುವ ಹುದ್ದೆಗಳನ್ನು ತುಂಬಬೇಕು. ಖಾಸಗಿ ವಲಯದಲ್ಲಿ ಉದ್ಯೋಗ ಭದ್ರತೆಗೆ ಕ್ರಮ ಜರುಗಿಸಬೇಕು. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುತ್ತಿರುವ ನೀತಿ ಕೈಬಿಡಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಅವರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿ.ಐ.ಟಿ.ಯು. ಜಿಲ್ಲಾ ಅಧ್ಯಕ್ಷ ಭಾಸ್ಕರ್‌ ರೆಡ್ಡಿ, ಮುಖಂಡರಾದ ಯಲ್ಲಾಲಿಂಗ, ಗೋಪಾಲ, ರಮೇಶ, ಹುಲುಗಪ್ಪ, ಲಲಿತಾ, ಆಶಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.