ADVERTISEMENT

ಆರೋಗ್ಯ, ಆಹಾರ ಭದ್ರತೆಗೆ ಡಿವೈಎಫ್ಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 13:12 IST
Last Updated 28 ಏಪ್ರಿಲ್ 2021, 13:12 IST

ಹೊಸಪೇಟೆ(ವಿಜಯನಗರ): ‘ಕೋವಿಡ್-19 ಸಾಂಕ್ರಾಮಿಕ ನಿಯಂತ್ರಿಸಲು ಯಾವುದೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳದೆ ರಾಜ್ಯ ಸರ್ಕಾರ ತನ್ನ ಹೊಣೆಗೇಡಿತನ ಮರೆಮಾಚಲು ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿರುವುದು ಖಂಡನೀಯ. ಲಾಕ್ ಡೌನ್ ಬದಲಿಗೆ ಕಠಿಣ ಸುರಕ್ಷಾ ಕ್ರಮ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹೊಸಪೇಟೆ ತಾಲ್ಲೂಕು ಸಮಿತಿ ಅಧ್ಯಕ್ಷ ಈಡಿಗರ ಮಂಜುನಾಥ ಒತ್ತಾಯಿಸಿದ್ದಾರೆ.

‘ಕೋವಿಡ್‌ನಿಂದ ಹೋದ ವರ್ಷ ಏನೆಲ್ಲ ನಡೆದಿದೆ ಎನ್ನುವುದು ಸರ್ಕಾರಕ್ಕೆ ಗೊತ್ತಿತ್ತು. ಆದರೆ, ಅದರಿಂದ ಎಚ್ಚೆತ್ತುಕೊಂಡಿಲ್ಲ. ತಜ್ಞರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸದೇ ಉದಾಸೀನ ತೋರಿದ್ದರಿಂದ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ’ ಎಂದು ಆರೋಪಿಸಿದ್ದಾರೆ.

‘ಆಕ್ಸಿಜನ್, ಹಾಸಿಗೆ ಕೊರತೆಯಿಂದ ಕಂಗೆಟ್ಟಿರುವ ಸೋಂಕು ಪೀಡಿತರನ್ನು ಕೆಲ ಖಾಸಗಿ ಆಸ್ಪತ್ರೆ, ಔಷಧ ಮಾಫಿಯಾಗಳು ಸುಲಿದು ತಿನ್ನುತ್ತಿವೆ. ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಣದಲ್ಲಿಟ್ಟು, ರಾಜ್ಯದಲ್ಲಿ ಕೊರೊನಾ ಪೀಡಿತ ಜನತೆಗೆ ಉಚಿತವಾಗಿ ಚಿಕಿತ್ಸೆ ಸೌಲಭ್ಯ ಒದಗಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

‘ಲಾಕ್‌ಡೌನ್‌ನಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಿರುದ್ಯೋಗ ಹಾಗೂ ಆರ್ಥಿಕ ಬಿಕ್ಕಟ್ಟು ಇನ್ನಷ್ಟು ಹೆಚ್ಚಲಿದೆ. ಸಣ್ಣ ವ್ಯಾಪಾರಿಗಳು, ಅಸಂಘಟಿತ ಕಾರ್ಮಿಕರು ಹಸಿವಿನ‌ ದವಡೆಗೆ ಜಾರಲಿದ್ದಾರೆ. ಸರ್ಕಾರ ಅಗತ್ಯ ತಯಾರಿ ಮಾಡಿಕೊಂಡಿದ್ದರೆ ಇಂತಹ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಲಾಕ್ ಡೌನ್ ಬದಲಿಗೆ ಪರ್ಯಾಯ ಸುರಕ್ಷಾ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.