ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ; ಉಪಮುಖ್ಯಮಂತ್ರಿ ಕಾರಜೋಳಗೆ ಮನವಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 5:51 IST
Last Updated 24 ಡಿಸೆಂಬರ್ 2020, 5:51 IST
ಕರ್ನಾಟಕ ರಾಜ್ಯ ಡಾ. ಬಾಬು ಜಗಜೀವನ್‌ರಾಮ್‌ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಗುರುವಾರ ಹೊಸಪೇಟೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ರಾಜ್ಯ ಡಾ. ಬಾಬು ಜಗಜೀವನ್‌ರಾಮ್‌ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಗುರುವಾರ ಹೊಸಪೇಟೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್‌ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ಡಾ. ಬಾಬು ಜಗಜೀವನ್‌ರಾಮ್‌ ಜಾಗೃತಿ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಗುರುವಾರ ನಗರ ಹೊರವಲಯದ ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ತಂಗಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸ್ವಾತಂತ್ರ್ಯ ದೊರೆತು ಏಳು ದಶಕಗಳಾದರೂ ಕೆಳಜಾತಿಯಲ್ಲಿರುವ ತಳವರ್ಗದವರು ಇದುವರೆಗೆ ಮುಖ್ಯವಾಹಿನಿಗೆ ಬಂದಿಲ್ಲ. ಒಳಮೀಸಲಾತಿ ಜಾರಿಗೆ ತಂದರೆ ಮಾತ್ರ ಮೇಲೆ ಬರಲು ಸಾಧ್ಯವಾಗಬಹುದು. ವಾಸ್ತವದಲ್ಲಿ ಮಾದಿಗ ಸಮುದಾಯದವರು ಪಡೆಯಬೇಕಾದ ಮೀಸಲಾತಿಯ ಪ್ರಯೋಜನವನ್ನು ಲಮಾಣಿ, ಭೋವಿ, ಕೊರಚ, ಕೊರಮ ಉಪಜಾತಿಗಳವರು ಪಡೆದುಕೊಳ್ಳುತ್ತಿದ್ದಾರೆ. ಸುಪ್ರೀಂಕೋರ್ಟ್‌ ನಿರ್ದೇಶನದ ಪ್ರಕಾರ, ಈ ಉಪಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಬೇಕು. ಆಗ ಅಸ್ಪೃಶ್ಯ ಜಾತಿಗಳವರಿಗೆ ನ್ಯಾಯ ಸಿಗುತ್ತದೆ ಎಂದು ಪ್ರತಿಪಾದಿಸಿದರು.

ADVERTISEMENT

ಸಾಮಾಜಿಕ ನ್ಯಾಯದ ಪರ ಇರುವ ಸಂಘಟನೆಗಳ ಹೋರಾಟದ ಫಲವಾಗಿ 2005ರಲ್ಲಿ ಸರ್ಕಾರ ಸದಾಶಿವ ಆಯೋಗ ರಚಿಸಿತು. 2012ರಲ್ಲಿ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ಸರ್ಕಾರ ಮಾತ್ರ ವಿಳಂಬ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು ಸದಾಶಿವ ಆಯೋಗದ ವರದಿ ಜಾರಿಗೆ ತರಲಾಗುವುದು ಎಂದು ಇತ್ತೀಚೆಗೆ ಭರವಸೆ ನೀಡಿದ್ದಾರೆ. ಅದರಂತೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಅಧ್ಯಕ್ಷ ಎಚ್‌. ಜಗನ್ನಾಥ್‌, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್‌, ಉಪಾಧ್ಯಕ್ಷ ಎರ್ರಿಸ್ವಾಮಿ ಹಾಗೂ ಸಮಾಜದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.