ಹೊಸಪೇಟೆ: ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಬಸ್ ಪಾಸ್ ಪಡೆಯಲು ತಂದಿರುವ ವ್ಯವಸ್ಥೆ ರದ್ದುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ಬುಧವಾರ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.
ಆನ್‌ಲೈನ್‌ನಲ್ಲಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಬೇಕಾದರೆ ಮೊಬೈಲ್, ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು. ಸೇವಾ ಸಿಂಧೂ ಕೇಂದ್ರದಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವುದರಿಂದ ₹100 ಕೊಟ್ಟು ಭರಿಸಬೇಕಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಬಹಳ ಕಷ್ಟವಾಗುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪಾಸ್ ಹೊಂದಿರುವ ವಿದ್ಯಾರ್ಥಿಗಳೊಂದಿಗೆ ಬಸ್ ನಿರ್ವಾಹಕರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಇದು ಖಂಡನಾರ್ಹ. ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು. ತಾಲ್ಲೂಕಿನ ನರಸಾಪುರ ಮಾಗಾಣಿಗೆ ಸಮರ್ಪಕವಾಗಿ ಬಸ್ ಓಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಫೆಡರೇಶನ್ ತಾಲ್ಲೂಕು ಅಧ್ಯಕ್ಷ ಜೆ. ಶಿವುಕುಮಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.