ಹೊಸಪೇಟೆ: ರಾಯಚೂರಿನ ವಿದ್ಯಾರ್ಥಿನಿ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶನಿವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್’ (ಎ.ಐ.ಡಿ.ಎಸ್.ಒ.), ‘ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ’ (ಎ.ಐ.ಎಂ.ಎಸ್.ಎಸ್.), ‘ಆಲ್ ಇಂಡಿಯಾ ಡೆಮೊಕ್ರಟಿಕ್ ಯುತ್ ಆರ್ಗನೈಜೇಷನ್’ (ಎ.ಐ.ಡಿ.ವೈ.ಒ.) ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ರ್‍ಯಾಲಿಯುದ್ದಕ್ಕೂ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ಬಳಿಕ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.‘ಇಡೀ ದೇಶ ಚುನಾವಣೆಯಲ್ಲಿ ಮುಳುಗಿರುವ ಸಂದರ್ಭದಲ್ಲಿ ರಾಯಚೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದರಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು’ ಎಂದು ಎ.ಐ.ಡಿ.ಎಸ್.ಒ. ಕಾರ್ಯದರ್ಶಿ ಜಿ. ಸುರೇಶ್ ಆಗ್ರಹಿಸಿದರು.
‘ವಿದ್ಯಾರ್ಥಿನಿಯದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿ ಪ್ರಕರಣವನ್ನು ಮುಚ್ಚು ಹಾಕಲು ಯತ್ನಿಸುತ್ತಿರುವುದು ಬಹಳ ಖಂಡನೀಯ. ವಿದ್ಯಾರ್ಥಿ ಸಂಘಟನೆಗಳ ಹೋರಾಟದ ಫಲವಾಗಿ ಅತ್ಯಾಚಾರ, ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈಗ ನಿಷ್ಪಕ್ಷಪಾತವಾಗಿ, ಯಾರ ಪ್ರಭಾವಕ್ಕೂ ಒಳಗಾಗದೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯದ ವಿವಿಧ ಭಾಗಗಳಲ್ಲಿ ಯುವತಿಯರು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಅವರಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಎ.ಐ.ಡಿ.ವೈ.ಒ. ಕಾರ್ಯದರ್ಶಿ ಎಚ್.ಎಂ. ಯರ್ರಿಸ್ವಾಮಿ, ಎ.ಐ.ಎಂ.ಎಸ್.ಎಸ್. ಕಾರ್ಯದರ್ಶಿ ಈಶ್ವರಿ, ಮುಖಂಡ ಪ್ರಶಾಂತ್ ಬಡಿಗೇರ್, ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.