ADVERTISEMENT

ಬಳ್ಳಾರಿ | ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ: ಜಿ.ಪದ್ಮಾವತಿ

ಪುನರ್ವಸಿತ ದೇವದಾಸಿಯರು, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸಲಹೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 5:25 IST
Last Updated 17 ಸೆಪ್ಟೆಂಬರ್ 2025, 5:25 IST
ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ ಮತ್ತಿತರರು ಇದ್ದರು. 
ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ ಮತ್ತಿತರರು ಇದ್ದರು.    

ಬಳ್ಳಾರಿ: ‘ರಾಜ್ಯ ಸರ್ಕಾರ ನಡೆಸುತ್ತಿರುವ ಮಾಜಿ ದೇವದಾಸಿಯರ ಮರುಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯದಲ್ಲಿ ಪುನರ್ವಸಿತ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೇ ಭಾಗವಹಿಸಿ ಮಾಹಿತಿ ನೋಂದಾಯಿಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ರಾಜ್ಯದಲ್ಲಿ 1994-95 ಮತ್ತು 2007-08ರಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ಈ ಮತ್ತೆ ಸಮೀಕ್ಷೆ ನಡೆಯುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಪುನರ್ವಸಿತ ದೇವದಾಸಿಯರ ಮಕ್ಕಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಎಲ್ಲಾ ಆಯಾಮಗಳಲ್ಲಿ ಮುನ್ನೆಲೆಗೆ ತರುವ ಆಶಾಭಾವನೆಯನ್ನು ಸರ್ಕಾರ ಹೊಂದಿದೆ. ಅವರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಅನುಷ್ಠಾನಕ್ಕಾಗಿ ಸಮೀಕ್ಷೆ ನಡೆಸುತ್ತಿದೆ. ತಪ್ಪದೇ ಸಕ್ರಿಯವಾಗಿ ಭಾಗವಹಿಸಬೇಕು’ ಎಂದು ಕೋರಿದರು.

ADVERTISEMENT

‘150 ಪ್ರಶ್ನಾವಳಿಗಳ ಈ ಸಮೀಕ್ಷಾ ಕಾರ್ಯವು 45 ದಿನಗಳ ಕಾಲ ನಡೆಯಲಿದ್ದು, ಈಗಾಗಲೇ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಮೀಕ್ಷೆಯಲ್ಲಿ ಸಮೀಕ್ಷಾದಾರರು ಯಾವುದೇ ಕಾರಣಕ್ಕೂ ರಜೆ ಹಾಕುವಂತಿಲ್ಲ’ ಎಂದರು.

‘ದಮನಿತರು, ಧ್ವನಿ ಇಲ್ಲದವರು, ಬಡವರು, ಮಹಿಳೆಯರು, ಎಚ್‌ಐವಿ ಸೋಂಕಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಬೇಕು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು’ ಎಂದು ಹೇಳಿದರು.

‘ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಪಡಿತರ ಚೀಟಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನ ಸೇರಿದಂತೆ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳು ಇದ್ದು, ಅಧಿಕಾರಿಗಳು ವಿಳಂಬ ತೋರದೇ ಅನುಷ್ಠಾನಗೊಳಿಸಬೇಕು’ ಎಂದರು.

ಸಭೆಯಲ್ಲಿ ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ವಿವಿಧ ಬೇಡಿಕೆಗಳನ್ನು  ಅಧ್ಯಕ್ಷರ ಮುಂದೆ ಪ್ರಸ್ತಾಪಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ಜಿಲ್ಲಾ ನಿರೂಪಣಾಧಿಕಾರಿ ಸವಿತಾ, ಬಳ್ಳಾರಿ ನಗರ ಮತ್ತು ಗ್ರಾಮಾಂತರ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮಾಜಿ ದೇವದಾಸಿಯರ, ಲಿಂಗತ್ವ ಅಲ್ಪಸಂಖ್ಯಾತರ ವಿವಿಧ ಸಂಘ-ಸಂಸ್ಥೆಗಳು ಪದಾಧಿಕಾರಿಗಳು ಇದ್ದರು. 

ಸಮೀಕ್ಷೆಯಿಂದ ಪುನರ್ವಸಿತ ದೇವದಾಸಿಯರು ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ವಸತಿ ಸೌಲಭ್ಯ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗಲಿದೆ
ಮಹಮ್ಮದ್ ಎನ್.ಝುಬೇರ್ ಹೆಚ್ಚುವರಿ ಜಿಲ್ಲಾಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.