ADVERTISEMENT

ಹೊಸಪೇಟೆ: ‘ಅಧಿಕಾರಿಗಳನ್ನು ಪ್ರಶ್ನಿಸಿ ವ್ಯವಸ್ಥೆ ಸರಿಪಡಿಸಿ’

ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 16:20 IST
Last Updated 19 ಮಾರ್ಚ್ 2023, 16:20 IST
ಹೊಸಪೇಟೆಯಲ್ಲಿ ಭಾನುವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸಮಾವೇಶದಲ್ಲಿ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಅವರಿಗೆ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಕ್ಕಿ ಲಕ್ಷ್ಮಣ್ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಹೊಸಪೇಟೆಯಲ್ಲಿ ಭಾನುವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸಮಾವೇಶದಲ್ಲಿ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಅವರಿಗೆ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಕ್ಕಿ ಲಕ್ಷ್ಮಣ್ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ವಿಜಯನಗರ ಜಿಲ್ಲಾ ಘಟಕದಿಂದ ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನಿ ಸಮಾವೇಶ ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಿಂದ ಪಟೇಲ್‌ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ರ್‍ಯಾಲಿ ನಡೆಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮವನ್ನು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಉದ್ಘಾಟಿಸಿ, ಗ್ರಾಮ ಸ್ವರಾಜ್ಯದ ಆಡಳಿತ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪ್ರತಿಯೊಂದನ್ನೂ ಅಧಿಕಾರಿಗಳಿಗೆ ಪ್ರಶ್ನಿಸುವ ಮೂಲಕ ವ್ಯವಸ್ಥೆ ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಕೆಲವೆಡೆ ಅಧಿಕಾರಿಗಳು ಮದ್ಯವರ್ತಿಗಳು, ವರ್ತಕರಂತೆ ವರ್ತಿಸುತ್ತಿದ್ದಾರೆ. ಕೂಡ್ಲಿಗಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ವರ್ತಕರಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಬ್ಲೀಚಿಂಗ್ ಪೌಡರ್ ಸರಬರಾಜು ಮಾಡಿದ್ದಾರೆ. ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧಿಕಾರಿಗಳು ಅನಗತ್ಯ ಮೂಗು ತೂರಿಸುವ ಕೆಲಸವನ್ನು ನಿಲ್ಲಿಸಬೇಕು. ಇದೇ ಚಾಳಿ ಮುಂದುವರಿಸಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಮಾಡಿದಂತಹ ಅನೇಕ ಕಾಮಗಾರಿಗಳು ಕಳಪೆಯಾಗಿವೆ. ಅವುಗಳನ್ನು ಸರಿಪಡಿಸಬೇಕು. ಯೋಜನೆ ಅನುಷ್ಠಾನದ ಅನುದಾನ ಗ್ರಾಮ ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಯಾವುದೇ ಯೋಜನೆಗಳ ಅನುಷ್ಠಾನಕ್ಕೂ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಕ್ಕಿ ಲಕ್ಷ್ಮಣ್, ಗ್ರಾಮ ಸ್ವರಾಜ್ಯದ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸಕ್ಕೆ ಯಾರು ಕೈ ಹಾಕಬಾರದು ಎಂದು ಆಗ್ರಹಿಸಿದರು.

ಒಕ್ಕೂಟದ ಸೋಮಪ್ಪ, ಶಶಿಕಲಾ, ಬೃಂದಾ, ಕೃಷ್ಣೇಗೌಡ, ಪಂಪಯ್ಯ, ಪ್ರದೀಪ್ ಪಾಟೀಲ, ಪ್ರಿಯಾಂಕ ಪವಾರ, ನಾಗರಾಜ್, ಲೋಕೇಶ್ ಹೊಳಗುಂದಿ, ವಿಜಯಕುಮಾರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.