ಹೊಸಪೇಟೆ(ವಿಜಯನಗರ): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಮುಂದಾಗಬೇಕೆಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪೀರ್‍ಬಾಷಾ ಮಾತನಾಡಿ, ಪ್ರಧಾನ ಮಂತ್ರಿಗಳು ಸೇರಿದಂತೆ ರಾಜ್ಯ ಮುಖ್ಯಮಂತ್ರಿಗಳು ಕೂಡಲೇ ಯುವಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೂಡಲೇ ನೇಮಕಾತಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.
ಸಮಿತಿಯ ಸದಸ್ಯ ಎರಿಸ್ವಾಮಿ ಮಾತನಾಡಿ, ‘ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಕೋವಿಡ್ ಕಾರಣ ಹೇಳಿ ಯಾವುದೇ ಒಂದು ಹುದ್ದೆ ತುಂಬಲಿಲ್ಲ. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಒಳಮೀಸಲಾತಿ ಹೆಸರಿನಲ್ಲಿ ಯಾವುದೇ ನೇಮಕಾತಿ ಮಾಡದಿರುವುದು ವಿಪರ್ಯಾಸ. ಕೂಡಲೇ ನೇಮಕಾತಿ ಮಾಡಬೇಕು’ ಎಂದು ಒತ್ತಾಯಿಸಿದರು.
ಸಮಿತಿಯ ಸದಸ್ಯರಾದ ಪ್ರಕಾಶ್ ಬಸವನದುರ್ಗಾ, ಪಾಲಾಕ್ಷ ಹಡಗಲಿ, ಮಂಜು ಬಾದಾಮಿ, ಶ್ರೀನಿವಾಸ, ಹರ್ಷಾ, ಅಭಿಲಾಶ್, ಸೈಯದ್ ಮೀರ್, ವಿನಯ್, ಪ್ರಕಾಶ್ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.