ADVERTISEMENT

‘ದೇಶದ ಚುನಾವಣಾ ವ್ಯವಸ್ಥೆ ವಿಶ್ವಕ್ಕೆ ಮಾದರಿ’

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 12:14 IST
Last Updated 25 ಜನವರಿ 2021, 12:14 IST
ಹೊಸಪೇಟೆಯ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಹೊಸಪೇಟೆಯ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು   

ಹೊಸಪೇಟೆ: ‘ನಮ್ಮ ದೇಶದ ಚುನಾವಣಾ ವ್ಯವಸ್ಥೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.

11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಇಲ್ಲಿನ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘130 ಕೋಟಿ ಜನಸಂಖ್ಯೆ ಇರುವ ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆಗಳು ಸುಸೂತ್ರವಾಗಿ ನಡೆಯುತ್ತಿವೆ. ಭೂತಾನ್‌, ಮಾಲ್ಡೀವ್ಸ್‌ ಸೇರಿದಂತೆ ಇತರೆ ದೇಶಗಳಲ್ಲೂ ಭಾರತ ಚುನಾವಣಾ ಆಯೋಗ ಚುನಾವಣೆಗಳನ್ನು ಸಂಘಟಿಸಿದೆ’ ಎಂದು ಹೇಳಿದರು.

ADVERTISEMENT

‘1950ರಲ್ಲೇ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದಿದೆ. ಆದರೆ, 2012ರಿಂದ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ರಾಷ್ಟ್ರದ ಯುವಜನರು ಮತದಾರರ ಪಟ್ಟಿಗೆ ಸೇರಬೇಕೆಂಬ ಉದ್ದೇಶದಿಂದ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ’ ಎಂದು ತಿಳಿಸಿದರು.

‘‌ಈ ಹಿಂದೆ ಅರ್ಹ ಮತದಾರರಾಗಲು ವಯಸ್ಸಿನ ಮಿತಿ 21 ಇತ್ತು. ಪ್ರಧಾನಿ ರಾಜೀವ್‌ ಗಾಂಧಿ ಅವರು 1988ರಲ್ಲಿ 61ನೇ ಕಾಯ್ದೆಗೆ ತಿದ್ದುಪಡಿ ತಂದು ವಯೋಮಿತಿ 18ಕ್ಕೆ ಇಳಿಸಿದರು. ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ ಉತ್ತಮ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ರೂಪುಗೊಳ್ಳುವಂತೆ ಮಾಡುವುದು ಅರ್ಹ ಮತದಾರರ ಕರ್ತವ್ಯ’ ಎಂದು ಪ್ರಾಧ್ಯಾಪಕ ಪದ್ಮನಾಭ ಕರ್ಣಂ ಉಪನ್ಯಾಸ ನೀಡಿದರು.

‘ನಗರ ಪ್ರದೇಶದವರಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುರಿತು ಇನ್ನಷ್ಟು ಜಾಗೃತಿ ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ಮಾಡಬೇಕಿದೆ’ ಎಂದರು.

ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ತಹಶೀಲ್ದಾರ್ ಎಚ್.ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸುನಂದಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಪ್ರಾಂಶುಪಾಲ ಬಿ.ಜಿ. ಕನಕೇಶಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.