ADVERTISEMENT

ಉದ್ಯೋಗ ಮೇಳ: 25 ಸಾವಿರ ಅಭ್ಯರ್ಥಿಗಳ ನಿರೀಕ್ಷೆ

ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 13:59 IST
Last Updated 14 ಏಪ್ರಿಲ್ 2025, 13:59 IST
ಕಲಬುರಗಿ ನಗರದ ಕೆಸಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ಯೋಗ ಮೇಳದ ಅಂತಿಮ ಸಿದ್ಧತೆಯನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು       ಪ್ರಜಾವಾಣಿ ಚಿತ್ರ
ಕಲಬುರಗಿ ನಗರದ ಕೆಸಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ಯೋಗ ಮೇಳದ ಅಂತಿಮ ಸಿದ್ಧತೆಯನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು       ಪ್ರಜಾವಾಣಿ ಚಿತ್ರ   

ಪ್ರಜಾವಾಣಿ ವಾರ್ತೆ

ಕಲಬುರಗಿ: ಇದೇ 16ರಂದು ನಗರದ ಹುಮನಾಬಾದ್ ರಿಂಗ್ ರಸ್ತೆ ಸಮೀಪದ ಕೆಸಿಟಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿರುವ ವಿಭಾಗಮಟ್ಟದ ಉದ್ಯೋಗ ಮೇಳದಲ್ಲಿ 25 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಕಾಲೇಜಿನ ಆವರಣದಲ್ಲಿ ಭಾನುವಾರ ಮೇಳದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಬರಲಿದ್ದು, ಅದಕ್ಕಾಗಿ ಜಿಲ್ಲಾ ಕೇಂದ್ರದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್‌ಲೈನ್‌ ಮೂಲಕವೂ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಬಹುದಾಗಿದೆ. ಈಗಾಗಲೇ 17 ಸಾವಿರ ಜನ ನೋಂದಣಿ ಮಾಡಿಸಿದ್ದಾರೆ. ಏ 16ರಂದು ಬೆಳಿಗ್ಗೆ 9ರಿಂದ ಸಂಜೆಯವರೆಗೆ ಮೇಳ ನಡೆಯಲಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಸ್ಥಳಕ್ಕೆ ಬಂದು ನೋಂದಣಿ ಮಾಡಿಸಬಹುದಾಗಿದೆ. ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. 275 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಆ ಕಂಪನಿಗಳು ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ’ ಎಂದರು.

ADVERTISEMENT

‘ಮುಂದಿನ ದಿನಗಳಲ್ಲಿ ಕಿತ್ತೂರು ಕರ್ನಾಟಕದ ಹುಬ್ಬಳ್ಳಿ ಅಥವಾ ಬೆಳಗಾವಿ, ಹಳೆ ಮೈಸೂರು ವಿಭಾಗದ ಉದ್ಯೋಗ ಮೇಳವನ್ನು ಮೈಸೂರಿನಲ್ಲಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.

‘ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಜಿಲ್ಲೆಗಳ ಸಚಿವರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲಿರುವ ಕಂಪನಿಗಳಿಗೆ 70 ಕೊಠಡಿಗಳನ್ನು ಕಾಲೇಜಿನ ಆವರಣದಲ್ಲಿ ಒದಗಿಸಲಾಗಿದ್ದು, ಪ್ರತಿ ಕೊಠಡಿಯಲ್ಲಿ ಮೂರರಿಂದ ನಾಲ್ಕು ಕಂಪನಿಗಳ ಪ್ರತಿನಿಧಿಗಳು ಅಭ್ಯರ್ಥಿಗಳ ಸಂದರ್ಶನವನ್ನು ಮಾಡಲಿದ್ದಾರೆ. ಅದೇ ದಿನ ಉದ್ಯೋಗ ನೇಮಕಾತಿ ಪತ್ರವನ್ನೂ ನೀಡಲಿದ್ದಾರೆ’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ 75 ಸಾವಿರ ನಿರುದ್ಯೋಗಿಗಳಿಗೆ ಯುವನಿಧಿ ಹಣ ತಲುಪುತ್ತಿದೆ. ಈ ಮೇಳದಲ್ಲಿ ಅವರಿಗೂ ಭಾಗವಹಿಸುವಂತೆ ಈಗಾಗಲೇ ಮೂರು ಬಾರಿ ಎಸ್‌ಎಂಎಸ್ ಕಳುಹಿಸಲಾಗಿದೆ. ಅಲ್ಲದೇ, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕುರಿತಂತೆ ಎಫ್‌ಕೆಸಿಸಿಐ ಸಂಸ್ಥೆಗೆ ಕೋರಿಕೆ ಸಲ್ಲಿಸಲಾಗಿದ್ದು, ಸಂಸ್ಥೆಯವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಕಾಂಗ್ರೆಸ್ ಮುಖಂಡರಾದ ಪ್ರವೀಣ ಹರವಾಳ, ಡಾ. ಕಿರಣ ದೇಶಮುಖ ಗೋಷ್ಠಿಯಲ್ಲಿದ್ದರು.

Quote - ನಿರುದ್ಯೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಉದ್ಯೋಗ ಮೇಳ ಆಯೋಜಿಸಿದೆ. ಅಂದು ಕಲಬುರಗಿಯ ವಿವಿಧ ಕಡೆಗಳಿಂದ ಬಸ್ ವ್ಯವಸ್ಥೆ ಮಾಡಲಾಗುವುದು ಡಾ.ಶರಣಪ್ರಕಾಶ ಪಾಟೀಲ ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ

9 ಯೋಜನೆಗಳಿಗೆ ಶಂಕುಸ್ಥಾಪನೆ

ಉದ್ಯೋಗ ಮೇಳ ಉದ್ಘಾಟಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 9 ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು. ಜಿಮ್ಸ್‌ನ ಮೇಲ್ಭಾಗದ ಮಹಡಿಯಲ್ಲಿ ಹೊಸದಾಗಿ ಆರಂಭವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಶಾಖೆ ತಾಯಿ ಮಗು ಆಸ್ಪತ್ರೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೆಚ್ಚುವರಿ 200 ಬೆಡ್‌ಗಳ ಆಸ್ಪತ್ರೆ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಕಟ್ಟಡ ಬಹುಕೌಶಲ ಅಭಿವೃದ್ಧಿ ಕೇಂದ್ರ ಉನ್ನತ ಶಿಕ್ಷಣ ಇಲಾಖೆಯಿಂದ 1500 ಆಸನ ಸಾಮರ್ಥ್ಯದ ಅತ್ಯಾಧುನಿಕ ಸಭಾಂಗಣ ಎಂಎಸ್‌ಕೆ ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.