ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಬುಧವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಪೌರಾಡಳಿತ ಸಚಿವ ರಹೀಂ ಖಾನ್ ವಂಧನೆ ಅರ್ಪಿಸಿದರು.
ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗವು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದು ಭಾರತದ ಒಕ್ಕೂಟಕ್ಕೆ ಸೇರಿಸಲು ಹೋರಾಟಗಾರರನ್ನು, ಅವರ ತ್ಯಾಗ ಮತ್ತು ಬಲಿದಾನಗಳನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಬುಧವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿ, ಅವರು ಮಾತನಾಡಿದರು.
ಹೈದರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಸರ್ದಾರ್ ವಲ್ಲಭಬಾಯಿ ಪಟೇಲರ ಪರಿಶ್ರಮದಿಂದ 1948ರ ಸೆ.17 ವಿಮುಕ್ತಿ ಪಡೆದವು. ಅದರ ಜ್ಞಾಪಕಾರ್ಥವಾಗಿ ಕಲ್ಯಾಣ ಕರ್ನಾಟಕ ಉತ್ಸವ ನಡೆಸಲಾಗುತ್ತದೆ ಎಂದರು.
‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಈ ಭಾಗದ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡಲಾಗುತ್ತಿದೆ.371 (ಜೆ) ಪ್ರಮಾಣ ಪತ್ರಗಳಿಂದ ಶಿಕ್ಷಣದಲ್ಲಿ ಹಾಗೂ ವಿವಿಧ ಇಲಾಖೆಗಳಲ್ಲಿ ಉದ್ಯೋಗದ ಮೀಸಲಾತಿ ಪಡೆಯಲು ಅನುಕೂಲವಾಗುತ್ತಿದೆ’ ಎಂದು ಸಚಿವರು ಹೇಳಿದರು.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ‘ಎ’ ಮತ್ತು ‘ಬಿ’ ಖಾತಾ ಯೋಜನೆಯನ್ನು ಎರಡೂ ಸದನಗಳಲ್ಲಿ ಮಂಡಿಸಿ ಕಾಯ್ದೆರೂಪಕ್ಕೆ ತರಲಾಗಿದೆ ಎಂದು ಅವರು ಇದೇ ವೇಳೆ ಹೇಳಿದರು.
ಸಂಸದ ಈ.ತುಕಾರಾಮ್ ಮಾತನಾಡಿ, ‘ ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಹೋರಾಟದ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ಅಡಿ ವಿಶೇಷ ಸ್ಥಾನಮಾನ ದೊರೆಯಿತು’ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಸಿರಿಗೇರಿ ಪನ್ನರಾಜ್ ಮಾತನಾಡಿ, ಸ್ವಾತಂತ್ರ್ಯ ನಂತರವು ಬಳ್ಳಾರಿ ಜಿಲ್ಲೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿಸಲು ನಡೆದ ಹೋರಾಟಗಳನ್ನು ಸ್ಮರಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಮತ್ತಿತರರು ಇದ್ದರು.
ಕಲ್ಯಾಣ ಕರ್ನಾಟಕ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನೀಡಿದ ಕೊಡುಗೆ ಕುರಿತು ಸಂಸದ ಇ. ತುಕಾರಾಂ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಆದರೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಹಲವು ವರ್ಷಗಳಿಂದ ಬಳ್ಳಾರಿ ಜಿಲ್ಲೆಗೆ ಮಾತ್ರ ಬೇರೆಲ್ಲ ಜಿಲ್ಲೆಗಳಿಗಿಂತಲೂ ಕಡಿಮೆ ಅನುದಾನ ಸಿಗುತ್ತಿರುವುದಕ್ಕೆ ಮಾತ್ರ ಉತ್ತರಿಸದೇ ಜಾರಿಕೊಂಡರು. ಸಮಾರಂಭದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ತೂರಿ ಬಂದ ಈ ಪ್ರಶ್ನೆಗೆ ಅವರು ಉತ್ತರಿಸಲಾಗದೇ ಮಾಧ್ಯಮಗಳಿಂದ ದೂರ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.