ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿದರು
ಕಂಪ್ಲಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಸಂಭವಿಸಬಹುದಾದ ಅತಿವೃಷ್ಟಿ, ಪ್ರವಾಹ ಹಾವಳಿ ಮತ್ತು ಪ್ರಕೃತಿ ವಿಕೋಪಗಳ ಕುರಿತಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಟ್ಟೆಚ್ಚರದಲ್ಲಿರುವಂತೆ ತಹಶೀಲ್ದಾರ್ ಜೂಗಲ ಮಂಜುನಾಯಕ ಸೂಚಿಸಿದರು.
ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆಗೊಂಡಲ್ಲಿ ಇಲ್ಲಿಯ ತುಂಗಭದ್ರಾ ನದಿ ಪಾತ್ರದ ಜನ, ಜಾನುವಾರುಗಳ ರಕ್ಷಣೆ ಮತ್ತು ಕಾಳಜಿ ಕೇಂದ್ರ ತೆರೆಯುವ ಕುರಿತಂತೆ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಡೆಂಗೆ, ಮಲೇರಿಯಾ, ಚಿಕುನ್ ಗುನ್ಯ ಮತ್ತು ನೀರು ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು. ಅಲ್ಲದೇ, ನೀರಿನ ಮಾದರಿಗಳನ್ನು ನಿಗದಿತ ಸಮಯದಲ್ಲಿ ಪರೀಕ್ಷಿಸಿ ಸುರಕ್ಷತೆ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಾನುವಾರುಗಳ ರೋಗ ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯವನ್ನು ಪೂರ್ಣ ಗೊಳಿಸಬೇಕು. ಜಾನುವಾರುಗಳಿಗೆ ಆಶ್ರಯ, ಮೇವು, ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮುಂಗಾರು ಹಂಗಾಮಿನ ಬೇಡಿಕೆಗೆ ಅನುಗುಣವಾಗಿ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸಬೇಕು. ಬಿರುಗಾಳಿ, ಅತಿವೃಷ್ಟಿಯಿಂದ ಹಾನಿಗೊಳಗಾಗುವ ಬೆಳೆಗಳ ಕುರಿತು ತ್ವರಿತವಾಗಿ ವರದಿ ಸಲ್ಲಿಸಬೇಕು. ಮಳೆಗಾಲದಲ್ಲಿ ಆಗಾಗ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಪುರಸಭೆ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಮಾಡಬೇಕು ಎಂದರು.
ಮಳೆ, ಬಿರುಗಾಳಿ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿ, ಸಿಬ್ಬಂದಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಉಪ ತಹಶೀಲ್ದಾರ್ ಬಿ.ರವೀಂದ್ರ ಕುಮಾರ್ ಜಗದೀಶ್, ಶಿರಸ್ತೇದಾರ ಪಂಪಾಪತಿ, ರಮೇಶ್, ರಾಧಿಕಾ, ಸಿ.ಆರ್.ಪಿ ಟಿ.ಎಂ. ಬಸವರಾಜ, ವಿವಿಧ ಇಲಾಖೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.