ADVERTISEMENT

ಜೆ.ಎನ್‌.ಯು. ಹೋರಾಟ ಬೆಂಬಲಿಸಿ ಪ್ರತಿಭಟನೆ

ಒಗ್ಗಟ್ಟು ಪ್ರದರ್ಶಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 16:48 IST
Last Updated 20 ನವೆಂಬರ್ 2019, 16:48 IST
ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದರು
ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದರು   

ಹೊಸಪೇಟೆ: ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆ.ಎನ್‌.ಯು.) ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಬಯಲು ಚಿಂತನಾ ಸಂಶೋಧನಾ ವಿದ್ಯಾರ್ಥಿಗಳ ಬಳಗದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ ಪೋಲೀಸರ ಕ್ರಮವನ್ನು ಧಿಕ್ಕಾರ ಕೂಗಿ ಖಂಡಿಸಿದರು. ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ರ್‍ಯಾಲಿ ನಡೆಸಿ, ನಂತರ ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿರುವ ಜೆ.ಎನ್‌.ಯು.ನಲ್ಲಿ ವಿವಿಧ ಭಾಗ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷ ಅಲ್ಲಿ ಓದಿದವರು ಐ.ಎ.ಎಸ್‌. ಸೇರಿದಂತೆ ಪ್ರತಿಷ್ಠಿತ ಹುದ್ದೆಗಳಿಗೆ ಹೋಗುತ್ತಿದ್ದಾರೆ. ಸರ್ಕಾರ ಕಡಿಮೆ ಶುಲ್ಕದಲ್ಲಿ ಎಲ್ಲರಿಗೂ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿದೆ. ಆದರೆ, ಈಗ ಏಕಾಏಕಿ ಶುಲ್ಕ ಹೆಚ್ಚಳ ಮಾಡಿ ಬಡವರ ಮೇಲೆ ಬರೆ ಎಳೆದಿದೆ’ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ADVERTISEMENT

‘ಶುಲ್ಕ ಏರಿಸದಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಅನೇಕ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮಂಗಳವಾರ ಕೂಡ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸರ್ಕಾರವು ಪೊಲೀಸ್‌ ದೌರ್ಜನ್ಯ ನಡೆಸಿದೆ. ಅಲ್ಲದೇ ಕೆಲ ವಿದ್ಯಾರ್ಥಿಗಳ ವಿರುದ್ಧ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದೆ. ಕೂಡಲೇ ಆ ಪ್ರಕರಣಗಳನ್ನು ಕೈಬಿಡಬೇಕು. ಶುಲ್ಕ ಏರಿಸುವ ಪ್ರಸ್ತಾವ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿಯೂ ಎರಡು ವರ್ಷಗಳಿಂದ ದಲಿತ, ಹಿಂದುಳಿದವರು ಫೆಲೋಶಿಪ್‌ಗೆ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇದುವರೆಗೆ ಹಣ ಬಿಡುಗಡೆಯಾಗಿಲ್ಲ. ಸಂಕಷ್ಟದಲ್ಲಿ ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಗೋಳು ತೋಡಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಶೈಲಜಾ, ಪ್ರಾಧ್ಯಾಪಕರಾದ ಪಾಂಡುರಂಗಬಾಬು,ಅಶೋಕ್‌ ಕುಮಾರ್‌, ವಿದ್ಯಾರ್ಥಿ ಮುಖಂಡರಾದ ಎಚ್‌.ಎಂ. ಸಂತೋಷ್‌, ಮುನಿರಾಜ್‌, ಸಂಗಮೇಶ್, ರಾಗಿಣಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.