
ಬಳ್ಳಾರಿ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿನ ಕೃಷಿಕ ಸಮಾಜದ ನೂತನ ಕಟ್ಟಡವನ್ನು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಶನಿವಾರ ಉದ್ಘಾಟಿಸಿದರು.
ಬಳ್ಳಾರಿ: ‘ರೈತರ ಸಮಸ್ಯೆಗಳನ್ನು ಕೃಷಿ ಇಲಾಖೆಯ ಮೂಲಕ ಸರ್ಕಾರದ ಗಮನಕ್ಕೆ ತರುವ ಸಂಪರ್ಕ ಸೇತುವಾಗಿ ಕೃಷಿಕ ಸಮಾಜ ಕೆಲಸ ಮಾಡುತ್ತದೆ’ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿನ ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
‘ಲೆಸ್ಲಿ ಚಾರ್ಲ್ಸ್ ಕೋಲ್ಮನ್ ಎಂಬುವವರು ಸ್ವತಂತ್ರ್ಯ ಪೂರ್ವದಲ್ಲಿ ರಾಜ್ಯದ ಕೃಷಿ ಇಲಾಖೆಯ ಮೊದಲ ನಿರ್ದೇಶಕರಾಗಿದ್ದರು. ಕೃಷಿಕ ಸಮಾಜ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದ 36 ತಾಲ್ಲೂಕುಗಳಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ನಿವೇಶನವಿದೆ. 32 ತಾಲ್ಲೂಕುಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕಟ್ಟಡ ನಿರ್ಮಾಣಕ್ಕೆ ₹27 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ ₹50 ಲಕ್ಷ ನೀಡಲು ನಿರ್ಧರಿಸಲಾಗಿದೆ’ ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ‘ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲಾಗುವುದು. ಇದರಿಂದ ಹೊಸಪೇಟೆ, ಬಳ್ಳಾರಿ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ಭಾಗದ ರೈತರಿಗೆ ಅನುಕೂಲವಾಗಲಿದೆ’ ಎಂದರು.
ಬಳ್ಳಾರಿ ಸಂಸದ ಈ.ತುಕಾರಾಂ ಮಾತನಾಡಿ, ‘ಅಖಂಡ ಬಳ್ಳಾರಿ ಜಿಲ್ಲೆಯ 8 ತಾಲ್ಲೂಕುಗಳಲ್ಲಿ ಸಂಸದರ ಅನುದಾನದಲ್ಲಿ ಪ್ರತಿ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳಿಗೆ ₹2 ಲಕ್ಷ ಮೌಲ್ಯದ ಕಂಪ್ಯೂಟರ್, ಪ್ರೊಜೆಕ್ಟರ್ ನೀಡಲಾಗಿದೆ. ವೈಜ್ಞಾನಿಕ ಕೃಷಿ ಪದ್ಧತಿ, ಸಾವಯವ ಕೃಷಿ ಅಳವಡಿಕೆ ಬಗ್ಗೆ ರೈತರಿಗೆ ತರಬೇತಿ ನೀಡಲು ಅನುಕೂಲವಾಗಲಿದೆ’ ಎಂದು ತಿಳಿಸಿದರು.
‘ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಕಂಪ್ಲಿ, ಕುರುಗೋಡು, ಸಿರುಗುಪ್ಪ ಭಾಗಗಳಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಮತ್ತು ಜಿಲ್ಲೆಯಲ್ಲಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು’ ಎಂದು ಸಚಿವರಿಗೆ ಮನವಿ ಮಾಡಿದರು.
‘ಬಳ್ಳಾರಿ ಜಿಲ್ಲೆಯು 2,81,522 ಎಕರೆ ಕೃಷಿ ಭೂಮಿ ಹೊಂದಿದ್ದು, 1,05,517 ಎಕರೆ ಮಳೆಯಾಧಾರಿತ ಪ್ರದೇಶ, 1,76,005 ಎಕರೆ ನೀರಾವರಿ ಪ್ರದೇಶ ಹೊಂದಿದೆ. ಈ ಬಾರಿಯಂತೆ ಮುಂದಿನ ವರ್ಷವೂ ಉತ್ತಮ ಮಳೆ, ಬೆಳೆಯಾಗಲಿ’ ಎಂದು ಆಶಿಸಿದರು.
ಕೃಷಿ ಇಲಾಖೆ ಜಂಟಿ ನಿದೇರ್ಶಕ ಸೋಮಸುಂದರ್ ಮಾತನಾಡಿ, ‘ರೈತರ ಸಮಸ್ಯೆಗಳನ್ನು ರಾಜ್ಯಮಟ್ಟದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯುವ ಕಾರ್ಯವು ಕೃಷಿಕ ಸಮಾಜದ್ದಾಗಿದೆ’ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಕೃಷಿಕ ಸಮಾಜಕ್ಕೆ 1984ರಲ್ಲಿ ಜಿಲ್ಲಾಡಳಿತ 10,368 ಚದರ ಅಡಿ ನಿವೇಶನ ನೀಡಿತ್ತು. 2020ರಲ್ಲಿ ಕಟ್ಟಡ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. 2022ರಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 2025 ರಲ್ಲಿ ₹1 ಕೋಟಿ ವೆಚ್ಚದ ಕಟ್ಟಡ ನಿರ್ಮಾಣಗೊಂಡಿದೆ’ ಎಂದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಕೃಷಿ ಸಚಿವರು, ಆಧುನಿಕ ಕೃಷಿ ಯಂತ್ರೋಪಕರಣಗಳು, ಸಾವಯವ ರಸ-ಗೊಬ್ಬರ, ಕೃಷಿ ಪರಿಕರಗಳು, ಆಹಾರ ಸಂಸ್ಕರಣಾ ಘಟಕಗಳ ಆಹಾರ ಉತ್ಪನ್ನ ಮಳಿಗೆ ಹಾಗೂ ವಿವಿಧ ಯೋಜನೆಗಳ ಮಾಹಿತಿಗಳನ್ನೊಳಗೊಂಡ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.