ಬಳ್ಳಾರಿ: ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.
ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಶನಿವಾರ, ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.
ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ.
2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ತಿಪ್ಪಣ್ಣ ಆಯ್ಕೆಯಾಗಿದ್ದರು. ಇದಕ್ಕೂ ಹಿಂದೆಯೂ ಅವರು ಮಹಾಸಭಾದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.