ADVERTISEMENT

ಲೋಕಸಭಾ ಚುನಾವಣೆ | ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಿ: ವೆಂಕಟೇಶ್‌ ಹೆಗಡೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 14:24 IST
Last Updated 29 ಮಾರ್ಚ್ 2024, 14:24 IST
ವೆಂಕಟೇಶ್‌ ಹೆಗಡೆ 
ವೆಂಕಟೇಶ್‌ ಹೆಗಡೆ    

ಬಳ್ಳಾರಿ: ‘ಕಾಂಗ್ರೆಸ್‌ ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿರುವ ಸಂಪ್ರದಾಯದಂತೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್‌ ನೀಡಬೇಕು’ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಕೆಪಿಸಿಸಿ ರಾಜ್ಯ ಜಂಟಿ ಸಂಯೋಜಕ ವೆಂಕಟೇಶ್‌ ಹೆಗಡೆ ಒತ್ತಾಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಎರಡು ಟಿಕೆಟ್ ನೀಡುವ ಪದ್ಧತಿ ಕಾಂಗ್ರೆಸ್‌ನಲ್ಲಿತ್ತು. ಕಲಬುರ್ಗಿ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್‌ ನೀಡಿದರೆ, ಚಿತ್ರದುರ್ಗ, ಕೋಲಾರ ಕ್ಷೇತ್ರದಲ್ಲಿ ಎಡಗೈ ಸಮುದಾಯಕ್ಕೆ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೇವಲ ಚಿತ್ರದುರ್ಗದಲ್ಲಿ ಮಾತ್ರ ಎಡಗೈ ಸಮುದಾಯಕ್ಕೆ ಟಿಕೆಟ್‌ ನೀಡಲಾಗಿದೆ. ಇದು ಸಮಾಜದಲ್ಲಿ ತಪ್ಪು ಸಂದೇಶ ಹೋಗಲು ಕಾರಣವಾಗಿದೆ‘ ಎಂದು ಹೇಳಿದರು. 

‘ಕೋಲಾರದಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಅಲ್ಲಿನ ನಾಯಕರು ಒತ್ತಾಯಿಸುತ್ತಿದ್ದಾರೆ. ಹೀಗೆ ಮಾಡಿದರೆ ಎಡಗೈ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮೀಸಲು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನೂ ಎಡಗೈ ಸಮುದಾಯಕ್ಕೆ ನೀಡಿರಲಿಲ್ಲ. ಪಕ್ಷದ ವರಿಷ್ಠರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಂಪ್ರದಾಯದಂತೆ ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು‘ ಎಂದು ಒತ್ತಾಯಿಸಿದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.