
ಹೂವಿನಹಡಗಲಿ: ತಾಲ್ಲೂಕಿನ ಲಿಂಗನಾಯಕನಹಳ್ಳಿಯ ಚನ್ನವೀರ ಶಿವಯೋಗಿಗಳ ಮಠದಲ್ಲಿ ಜಂಗಮೋತ್ಸವ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹದಲ್ಲಿ 13 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.
ಸಾನ್ನಿಧ್ಯ ವಹಿಸಿದ್ದ ನೀಲಗುಂದದ ಚನ್ನಬಸವ ಸ್ವಾಮೀಜಿ ಮಾತನಾಡಿ, ಸುಕ್ಷೇತ್ರದಲ್ಲಿ ಸತಿಪತಿಗಳಾದವರು ಗುರು ಹಿರಿಯರನ್ನು ಗೌರವಿಸಿ, ಆದರ್ಶ ದಂಪತಿಯಾಗಿ ಬಾಳಬೇಕು. ಶ್ರೀಮಠದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುವ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿವೆ. ಭಕ್ತರು ಮಠದ ಸಾಮಾಜಿಕ, ಧಾರ್ಮಿಕ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀಮಠದ ಪೀಠಾಧಿಪತಿ ಚನ್ನವೀರ ಸ್ವಾಮೀಜಿ ಮಾತನಾಡಿ, ಸುಖೀ ಕುಟುಂಬಕ್ಕೆ ದಂಪತಿಗಳಲ್ಲಿ ತಾಳ್ಮೆ, ಸಂಯಮ ಅಗತ್ಯ. ಯುವಕರು ದುಶ್ಚಟದ ಗೀಳು ಅಂಟಿಸಿಕೊಳ್ಳದೇ ಕಾಯಕ ಪ್ರಜ್ಞೆ ಬೆಳೆಸಿಕೊಂಡು ಕುಟುಂಬದ ಬೆಳವಣಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಗವಿಮಠದ ಹಿರಿಶಾಂತವೀರ ಸ್ವಾಮೀಜಿ, ಹೊಳಲಿನ ಚನ್ನಬಸವ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಮಹಿಳೆಯರ ಪೂರ್ಣಕುಂಭದೊಂದಿಗೆ ಸ್ವಾಮೀಜಿಗಳ ಜಂಗಮೋತ್ಸವ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.