ADVERTISEMENT

ಬಳ್ಳಾರಿ| ಪ್ರಾಮಾಣಿಕರಿಂದ ಸರ್ಕಾರಕ್ಕೆ ಗೌರವ: ಶಾಸಕ ಭರತ್‌ ರೆಡ್ಡಿ

ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 2:19 IST
Last Updated 18 ಫೆಬ್ರುವರಿ 2026, 2:19 IST
ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಾಸಕ ನಾರಾ ಭರತ್‌ ರೆಡ್ಡಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು
ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಾಸಕ ನಾರಾ ಭರತ್‌ ರೆಡ್ಡಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು   

ಬಳ್ಳಾರಿ: ‘ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ಸರ್ಕಾರಕ್ಕೆ ಗೌರವ ಸಿಗುತ್ತದೆ’ ಎಂದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಭವನ ನಿರ್ಮಾಣಕ್ಕೆ ಭೂಮಿ ಇಲ್ಲ’ ಎಂಬ ದೂರಿಗೆ ಸ್ಪಂದಿಸಿದ ಅವರು, ‘ನಗರ ವ್ಯಾಪ್ತಿಯಲ್ಲಿ ಜಾಗ ಪಡೆಯಬೇಕೆಂದರೆ ಈ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚಿಸಬೇಕಾಗುತ್ತದೆ. ಹಾಗಾಗಿ ನಗರದಲ್ಲಿ ಸರ್ಕಾರಿ ಭೂಮಿ ಗುರುತಿಸಿ ರೂಪುರೇಷೆ ಸಿದ್ದಪಡಿಸಿ ನೀಡಿದರೆ, ಮುಂದಿನ ಕ್ರಮಕ್ಕಾಗಿ ಅಗತ್ಯ ಸಹಕಾರ ಒದಗಿಸಲಾಗುವುದು’ ಎಂದರು.

ADVERTISEMENT

‘ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂಬುದು ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಬೇಡಿಕೆ. ಇದಕ್ಕಾಗಿ ಅಧ್ಯಯನ ತಂಡಗಳನ್ನು ಕಳುಹಿಸಲಾಗಿದೆ. ಅವರು ನೀಡುವ ವರದಿಯನ್ನಾಧಾರಿಸಿ ಕಾನೂನು ಚೌಕಟ್ಟಿನಲ್ಲಿ ಜಾರಿಗೊಳಿಸಲು ಮಾತುಕತೆ ನಡೆದಿದೆ’ ಎಂದರು. 

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಮುಂದಿನ ದಿನಗಳಲ್ಲಿ ಬಳ್ಳಾರಿಯಲ್ಲಿ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್. ಬಸರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಅಬಕಾರಿ ಇಲಾಖೆಯ ಅಧೀಕ್ಷಕ ಅನೀಲ್ ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಶಾಖೆಯ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಮೇನಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ಚಿಂತನೆ

ಮೇ ತಿಂಗಳಿನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜನೆ ಒಳಗೊಂಡು ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕೈಜೋಡಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆ ಅಧ್ಯಕ್ಷ (ಪ್ರಭಾರಿ) ಸದಾನಂದ ನೆಲ್ಕುದ್ರಿ ಮಾತನಾಡಿದರು. ರಾಷ್ಟ್ರಮಟ್ಟದ ಸಾಧನೆ ಮಾಡಿದ ಶಿವಲಿಂಗಪ್ಪ ಹಂದ್ಯಾಳು ಶಾಂತಮ್ಮ ಚೆಲುವಾದಿ ಶೇಕ್ಷಾವಲಿ ಇವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮುನ್ನ ಕಂಪ್ಲಿ ಕುರುಗೋಡು ಸಂಡೂರು ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕುಗಳ ಸರ್ಕಾರಿ ನೌಕರರು ಪಥಸಂಚಲನ ನಡೆಸಿದರು. ಬಳಿಕ ಕ್ರೀಡಾಜ್ಯೋತಿ ಸ್ವೀಕರಿಸಿ ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಹೊರಾಂಗಣ ಒಳಾಂಗಣದಲ್ಲಿ ವಿವಿಧ ವಿಭಾಗದ ಕ್ರೀಡೆಗಳು ನಡೆದರೆ ಮಹರ್ಷಿ ವಾಲ್ಮೀಕಿ ಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.