ಕೂಡ್ಲಿಗಿ: ‘ಜನರ ಸಮಸ್ಯೆಗಳಿಗೆ ನಾವು ಧ್ವನಿಯಾಗಬೇಕಾಗಿದ್ದು, ಸ್ಥಳೀಯವಾಗಿ ಅದನ್ನು ಈಡೇರಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.
ತಾಲ್ಲೂಕಿನ ಸೂಲದಹಳ್ಳಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಮಟ್ಟದ ‘ಮನೆ ಮನೆಗೆ ನಮ್ಮ ಶಾಸಕರು– ಮನೆ ಬಾಗಿಲಿಗೆ ನಮ್ಮ ಸರ್ಕಾರ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸೂರು ಮತ್ತು ಉದ್ಯೋಗ ಜನರ ನಿರೀಕ್ಷೆಯಾಗಿದ್ದು, ಸರ್ಕಾರ ರೂಪಿಸಿದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕಿದೆ. ತಾಲ್ಲೂಕಿಗೆ ಎರಡು ಕೆರೆಗಳು ಮಂಜೂರಾಗಿದ್ದು, ಇವು ಶಾಶ್ವತ ಕೆಲಸಗಳಾಗಿವೆ. ಪ್ರತಿ ಪಂಚಾಯಿತಿಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಾಗುತ್ತದೆ’ ಎಂದರು.
ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 300ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು. ಬೆಳಿಗ್ಗೆ ಗ್ರಾಮದಲ್ಲಿ ಶ್ರಮದಾನ ಮಾಡುವ ಮೂಲಕ ಶಾಸಕರು, ಅಧಿಕಾರಿಗಳು ಸ್ವಚ್ಛತಾ ಕಾರ್ಯ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಮಾತನಾಡಿದರು. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ತಹಾಶೀಲ್ದಾರ್ ವಿ.ಕೆ. ನೇತ್ರಾವತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋವಿ ರತ್ನಮ್ಮ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ಯಾಮಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ವೆಂಕಟೇಶ್, ಮುಖಂಡರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.