
ಮರಿಯಮ್ಮನಹಳ್ಳಿ: ‘ದೇಶದ ಪ್ರಾಚೀನ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಸಹ ಒಂದಾಗಿದೆ’ ಎಂದು ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯ ಪವನ್ ಹೇಳಿದರು.
ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಮಂತ್ರಾಲಯ, ರಾಜೀವ್‍ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಕೃತಿ ಚಿಕಿತ್ಸೆ ಮಾಹಿತಿ ಮತ್ತು ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.
‘ಪ್ರಕೃತಿದತ್ತವಾಗಿ ಸಿಗುವ ಸಂಪನ್ಮೂಲಗಳನ್ನು ಬಳಸಿಕೊಂಡು ನೀಡುವ ಚಿಕಿತ್ಸೆ ಪರಿಣಾಮಕಾರಿಯಾಗಿದೆ. ನವೆಂಬರ್ 18ರಂದು ನಡೆಯುವ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಒಂದು ವಾರ ಪ್ರಕೃತಿ ಚಿಕಿತ್ಸೆ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದರು.
ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿ, ‘ಇಂದಿನ ಒತ್ತಡದ ದಿನಗಳಲ್ಲಿ ಸಾರ್ವಜನಿಕರು ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಮುಕ್ತರಾಗಲು ಪ್ರಕೃತಿ ಚಿಕಿತ್ಸೆ ಉತ್ತಮವಾಗಿದೆ’ ಎಂದು ಹೇಳಿದರು.
ವೈದ್ಯರಾದ ನವೀನ್, ಮುನೀರ್ ಮಾತನಾಡಿದರು. ಪಟ್ಟಣ ಪಂಚಾಯಿತಿ ಸದಸ್ಯೆ ಕುಸುಮ ಬಿ. ರಮೇಶ್, ಸುಭಾನ್, ರಾಮಣ್ಣ, ಚಂದ್ರಶೇಖರ್, ಉಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.