
ಹಗರಿಬೊಮ್ಮನಹಳ್ಳಿ: ‘ಕಲ್ಯಾಣ ಕರ್ನಾಟಕದಲ್ಲಿ ಆಡಳಿತ ಪಕ್ಷದ ಬಹುದೊಡ್ಡ ಪ್ರಭಾವಿಗಳು, ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ನಿಜವಾದ ಕಲ್ಯಾಣ ಆಗಿಲ್ಲ’ ಎಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ಪಟ್ಟಣದಲ್ಲಿ ಜೆಡಿಎಸ್ ಪಕ್ಷದಿಂದ ಭಾನುವಾರ ಹಮ್ಮಿಕೊಂಡಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕಳೆದ ವರ್ಷ ಅತಿವೃಷ್ಟಿಯಿಂದ ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಬೆಳೆ ಸಂಪೂರ್ಣ ನಾಶವಾಗಿದ್ದರೂ, ಮುಖ್ಯಮಂತ್ರಿ, ಕೃಷಿ ಸಚಿವರು ರೈತರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ. ಕೇಂದ್ರ ಸರ್ಕಾರದ ಪರಿಹಾರವನ್ನೂ ತಲುಪಿಸಲಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಲ್ಲಿ ನಿರತರಾಗಿದ್ದಾರೆ’ ಎಂದು ದೂರಿದರು.
‘ಮೂರು ವರ್ಷದಲ್ಲಿ 2,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಹುಡುಕಿಲ್ಲ, ರೈತರಿಗೆ ಅಗತ್ಯವಿರುವ ಸೌಲಭ್ಯಗಳನ್ನೂ ನೀಡಿಲ್ಲ. ರೈತರ ರಕ್ಷಣೆಗೆ ಸಹ ಮುಂದಾಗಿಲ್ಲ. ಪಂಚ ಗ್ಯಾರಂಟಿಗಳ ಹೆಸರಿಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.
ಶಾಸಕ ಕೆ. ನೇಮರಾಜನಾಯ್ಕ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಅನಿಲ್ ಲಾಡ್, ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ವೈ. ಮಲ್ಲಿಕಾರ್ಜುನ ಮಾತನಾಡಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬದಾಮಿ ಮೃತ್ಯುಂಜಯ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಲಾಯಿತು. ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ತಾಯಣ್ಣ, ಕನ್ನಿಹಳ್ಳಿ ಚಂದ್ರಶೇಖರ್, ಶಿವಶಂಕರ್, ಗವಿಸಿದ್ದಯ್ಯ, ಕೆ. ಶಾರದಾ ಮಂಜುನಾಥ ಇದ್ದರು.
‘ಲೂಟಿ ಬೆಲೆ ಏರಿಕೆಯೇ ಕಾಂಗ್ರೆಸ್ ಕೊಡುಗೆ’
‘ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ₹37 ಸಾವಿರ ಕೋಟಿ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿಯನ್ನು ಲೂಟಿ ಮಾಡಿದ್ದಾರೆ. ಪ್ರತಿ ವರ್ಷ ₹1 ಲಕ್ಷ ಕೋಟಿಯಷ್ಟು ಸಾಲದ ಹೊರೆಯನ್ನು ಜನರ ಮೇಲೆ ಹೊರಿಸುವುದು ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ’ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.