ಕೂಡ್ಲಿಗಿ: ‘ಸಾರ್ವಜನಿಕರು ನೀಡುವ ಸಲಹೆ ಸೂಚನೆಗಳನ್ನು ಪರಿಗಣಿಸಿ ಕ್ಷೇತ್ರದ ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಲಾಗುವುದು’ ಎಂದು ಶಾಸಕ ಡಾ. ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕ್ಷೇತ್ರದ ಅಭಿವೃದ್ಧಿಗೆ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಟಾನಗೊಳಿಸಲಾಗಿದೆ. ಹಿಂದುಳಿದ ಕ್ಷೇತ್ರದಲ್ಲಿ ಇನ್ನೂ ಅನೇಕ ಕಾರ್ಯಗಳು ಆಗಬೇಕಾಗಿದ್ದು, ಇದಕ್ಕಾಗಿ ಸಾರ್ವಜನಿಕ ಸಲಹೆ ಸೂಚನೆಗಳನ್ನು ಪಡೆಯಲು ಈ ಸಭೆ ನಡೆಸಲಾಗಿದೆ. ಅನೇಕರು ಉತ್ತಮ ಸಲಹೆಗಳನ್ನು ನೀಡಿದ್ದಾರೆ’ ಎಂದರು.
‘ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿರುವ ಅಂಶಗಳನ್ನು ಕಲೆ ಹಾಕಿ ಯೋಜನೆ ರೂಪಿಸಲಾಗುವುದು. ಕೃಷಿ ವಿಜ್ಞಾನ ಕೇಂದ್ರದಂತಹ ದೂರಗಾಮಿ ಯೋಜನೆಗಳಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಗುಂಡಿನಹೊಳೆಯ ಬೀಜೋತ್ಪಾದನೆ ಕೇಂದ್ರದ ಆವರಣದಲ್ಲಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ಸರ್ಕಾರ ಅದೇಶ ನೀಡಿದ್ದು, ಇದರ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು’ ಎಂದರು.
‘ಪಟ್ಟಣದಲ್ಲಿ ಪ್ರತ್ಯೇಕ ಬಾಲಕಿಯರ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಸ್ಥಾಪನೆ, ಹೆಚ್ಚುವರಿ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪನೆ ಮಾಡುವುದು, ಪಟ್ಟಣದಲ್ಲಿನ ಸಂಡೂರು ರಸ್ತೆ ವಿಸ್ತರಣೆ, ಮಾಂಸ ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡವುದು ಸೇರಿದಂತೆ ಸಭೆಯಲ್ಲಿ ನೀಡಲಾದ ಸಲಹೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಇದೇ ಸಂದರ್ಭದಲ್ಲಿ ಸರ್ಕಾರದಿಂದ ನೀಡಿದ್ದ ಲ್ಯಾಪ್‌ಟ್ಯಾಪ್‍ಗಳನ್ನು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಗ್ರಾಮಾಡಳಿತಾಧಿಕಾರಿಗಳಿಗೆ ವಿತರಣೆ ಮಾಡಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ನರಸಪ್ಪ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಕೊಟ್ಟೂರು ತಹಶೀಲ್ದಾರ್ ಅಮರೇಶ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.