ADVERTISEMENT

ಹೊಸಪೇಟೆ | ತಹಶೀಲ್ದಾರ್‌ ಹತ್ಯೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 9:15 IST
Last Updated 10 ಜುಲೈ 2020, 9:15 IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ತಹಶೀಲ್ದಾರ್ ಹತ್ಯೆ ಖಂಡಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ತಹಶೀಲ್ದಾರ್ ಹತ್ಯೆ ಖಂಡಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಹೊಸಪೇಟೆ: ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವರು ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು. ದುಷ್ಕೃತ್ಯ ಎಸಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

‘ಚಂದ್ರಮೌಳೇಶ್ವರ ಅವರು ಜಮೀನು ಸರ್ವೇ ಕೆಲಸಕ್ಕೆ ಹೋಗಿದ್ದರು. ಆದರೆ, ಪೊಲೀಸರ ಸಮ್ಮುಖದಲ್ಲೇ ಚಾಕುವಿನಿಂದ ಇರಿದು ಅವರನ್ನು ಸಾಯಿಸಿರುವುದು ದುರದೃಷ್ಟಕರ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣದಲ್ಲಿ ಕೆಲಸ ನಿರ್ವಹಿಸುವಂತಾಗಿದೆ. ಈ ಹಿಂದೆ ಕಂದಾಯ, ಭೂಮಾಪನ, ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಇಂತಹುದೇ ಘಟನೆಗಳು ನಡೆದಿವೆ. ಆದರೂ ಅದಕ್ಕೆ ಕಡಿವಾಣ ಬಿದ್ದಿಲ್ಲ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

‘ಕೊಲೆಯಂತಹ ಹೀನ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಮೃತರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಮಟ್ಟದ ಪರಿಹಾರ ಕೊಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕೊಡಬೇಕು. ಸರ್ಕಾರಿ ನೌಕರರು ಯಾವುದೇ ರೀತಿಯ ಆತಂಕವಿಲ್ಲದೆ ಕೆಲಸ ಮಾಡುವಂತಹ ಸೂಕ್ತ ವಾತಾವರಣ ನಿರ್ಮಿಸಿ, ಎಲ್ಲರಿಗೂ ಭದ್ರತೆ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಸಂಘದ ತಾಲ್ಲೂಕು ಅಧ್ಯಕ್ಷ ಜಿ. ಮಲ್ಲಿಕಾರ್ಜುನಗೌಡ, ರಾಜ್ಯ ಪರಿಷತ್‌ ಸದಸ್ಯ ಎಸ್‌. ಬಸವರಾಜ್‌, ಖಜಾಂಚಿ ಡಿ. ಯರ್ರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ, ಮುಖಂಡರಾದ ಜಿ. ಕಾಳಪ್ಪಗೌಡ್ರು, ಸುರೇಶ್, ಎನ್.ಎಸ್‌. ರೇವಣಸಿದ್ದಪ್ಪ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.