ADVERTISEMENT

ಬಳ್ಳಾರಿ: ನಗರೋತ್ಥಾನ ಕೆಲಸ ಪೂರ್ಣಗೊಳಿಸಿ; ಸಚಿವ ರಹೀಂ ಖಾನ್ ಸೂಚನೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ರಹೀಂ ಖಾನ್ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 5:25 IST
Last Updated 15 ಆಗಸ್ಟ್ 2025, 5:25 IST
ಬಳ್ಳಾರಿ ನಗರದ ನೂತನ ಜಿಲ್ಲಾಡಳಿತ ಭವನದದಲ್ಲಿ ಗುರುವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌ ಮಾತನಾಡಿದರು
ಬಳ್ಳಾರಿ ನಗರದ ನೂತನ ಜಿಲ್ಲಾಡಳಿತ ಭವನದದಲ್ಲಿ ಗುರುವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌ ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಬಳ್ಳಾರಿ: ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಹಂತ 4ರಲ್ಲಿ ಕೈಗೊಂಡಿರುವ ವಿವಿಧ ಬಾಕಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಜಿಲ್ಲೆಗೆ ನಗರೋತ್ಥಾನ ಯೋಜನೆಯಡಿ 4ನೇ ಹಂತದಲ್ಲಿ ವಿವಿಧ ಕಾಮಗಾರಿಗಳಿಗೆ ₹68 ಕೋಟಿ ಮಾಡಲಾಗಿದೆ. ಅದರಲ್ಲಿ ₹31 ಕೋಟಿ ಖರ್ಚು ಮಾಡಲಾಗಿದೆ. ಇನ್ನೂ ಪೂರ್ಣಗೊಳ್ಳದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು. 

‘ನಗರೋತ್ಥಾನ ಹಂತ-4 ರಲ್ಲಿ ಮಂಜೂರಾದ 104 ಕಾಮಗಾರಿಗಳಲ್ಲಿ 38 ಕಾಮಗಾರಿಗಳು ಪೂರ್ಣಗೊಂಡಿದ್ದು, 45 ಕಾಮಗಾರಿಗಳು ಪ್ರಗತಿಯಲ್ಲಿವೆ. ಅದರಲ್ಲಿ 32 ವೈಯಕ್ತಿಕ ಕಾಮಗಾರಿಗಳಿಗೆ ಹಾಗೂ 2 ವಂತಿಗೆ ಕಾಮಗಾರಿಗಳಿಗೆ ಹಣ ಬಿಡುಗಡೆಗಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಇನ್ನೂ ಪ್ರಾರಂಭಿಸಬೇಕಾದ 22 ಕಾಮಗಾರಿಗಳಲ್ಲಿ 4 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಅಬ್ದುಲ್ ರೆಹಮಾನ್ ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಹೀಂ ಖಾನ್, ‘ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದಾಗ ಮುಖ್ಯಮಂತ್ರಿಯವರು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅನುದಾನ ಬಿಡುಗಡೆಗಾಗಿ ಗುತ್ತಿಗೆದಾರರನ್ನು ಕಚೇರಿಗೆ ಅಲೆದಾಡಿಸುವಂತಿಲ್ಲ. ಸಂಬಂಧಿಸಿದ ಎಂಜಿನಿಯರ್‌ಗಳ ಸಭೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ‘ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗಿದೆ’ ಎಂದು ಸಭೆಗೆ ತಿಳಿಸಿದರು.

‘ಈ ಭಾಗದಲ್ಲಿ ಕುಡಿಯುವ ನೀರಿಗೆ ತುಂಗಭದ್ರಾ ಜಲಾಶಯವನ್ನು ಅವಲಂಬಿಸಲಾಗಿದೆ. ಕಾಲುವೆಗಳ ಮೂಲಕ ನೀರು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದೆ’ ಎಂದು ಸಭೆಗೆ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್. ಬಸವರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಸಚಿವರ ಆಪ್ತ ಕಾರ್ಯದರ್ಶಿ ಮುರಳೀಧರ್ ಇದ್ದರು.

ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಆದ್ಯತೆ ನೀಡಿ ವೈಜ್ಞಾನಿಕವಗಿ ಘನತ್ಯಾಜ್ಯ ನಿರ್ವಹಣೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಅಗತ್ಯ
ರಹೀಂ ಖಾನ್‌ ಪೌರಾಡಳಿತ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.