
ಸಂಡೂರು: ‘ತಾಲ್ಲೂಕಿನ ಹಳ್ಳಿಗಳಲ್ಲಿ ಅರಣ್ಯ ಹಕ್ಕು ಸಮಿತಿಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಸಂಪೂರ್ಣವಾಗಿ ತಿರಸ್ಕರಿಸುವುದು ಸರಿಯಲ್ಲ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ, ರೈತರಿಗೆ ಹಕ್ಕುಪತ್ರ ವಿತರಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್. ಶಿವಶಂಕರ್ ಹೇಳಿದರು.
ತಾಲ್ಲೂಕಿನ ಭುಜಂಗನಗರ ಗ್ರಾಮದಲ್ಲಿ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 4ನೇ ತಾಲ್ಲೂಕು ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಭುಜಂಗನಗರ ಗ್ರಾಮದಲ್ಲಿ ಒಟ್ಟು 281 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಧಿಕಾರಿಗಳು ಅವುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ, ತಿರಸ್ಕರಿಸಿದ್ದಾರೆ’ ಎಂದರು.
ತಾಲ್ಲೂಕು ಘಟಕದ ಕಾರ್ಯದರ್ಶಿ ಕಲಂದರ್ ಬಾಷಾ ಮಾತನಾಡಿ, ‘ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಕಂದಾಯ ಇಲಾಖೆಯು ಖರಾಬು ಎಂಬುದಾಗಿ ಘೋಷಿಸಿ, ರೈತರಿಗೆ ವಂಚಿಸುತ್ತಿದೆ. ರೈತರಿಗೆ ಪಟ್ಟಗಳನ್ನು ವಿತರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನ ಬಡ ವಿದ್ಯಾರ್ಥಿಗಳಿಗೆ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಅಧೀನದ ಗಣಿ ಕಂಪನಿಗಳಲ್ಲಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಎನ್. ಶಂಕ್ರಣ್ಣ ಧ್ವಜಾರೋಹಣ ನೆರೆವೇರಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ, ದೇವದಾಸಿ ಮಹಿಳಾ ವಿಮೋಚನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎ. ಸ್ವಾಮಿ, ಡಿವೈಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಸೈಯದ್ ಷರೀಫ್, ಸದಸ್ಯ ಎಸ್. ಕಾಲುಬಾ, ಗ್ರಾಮ ಘಟಕದ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ತಾಯಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.