ಸಂಡೂರು: ತಾಲ್ಲೂಕಿನ ಯಶವಂತನಗರ ಗ್ರಾಮದ ಹೊರವಲಯದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಟೋಲ್ ಸಂಗ್ರಹ ಕೇಂದ್ರಕ್ಕೆ ಅಗತ್ಯ ಸೌಕರ್ಯ ಕಲ್ಪಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕಿ ಅನ್ನಪೂರ್ಣ ತುಕಾರಾಂ ಅವರಿಗೆ ವಿವಿಧ ಗ್ರಾಮಗಳ ಜನರು ಹಾಗೂ ಲಾರಿ ಚಾಲಕರು ಒತ್ತಾಯಿಸಿದರು.
‘ಸರ್ವಿಸ್ ರಸ್ತೆ, ಸಿಸಿ ಟಿ.ವಿ ಕ್ಯಾಮೆರಾ, ಆಂಬುಲೆನ್ಸ್, ಶೌಚಾಲಯ ಮೊದಲಾದ ಸೌಲಭ್ಯ ಕಲ್ಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಈಚೆಗೆ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರೂ ಟೋಲ್ ಕೇಂದ್ರದ ಅಧಿಕಾರಿಗಳು ಆಂಬುಲೆನ್ಸ್ ವ್ಯವಸ್ಥೆ ಮಾಡಲಿಲ್ಲ’ ಎಂದು ಆರೋಪಿಸಿದರು.
‘ಈ ಬಗ್ಗೆ ಹಲವು ಬಾರಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರೂ, ಕ್ರಮ ವಹಿಸುತ್ತಿಲ್ಲ. ಕೂಡಲೇ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕಿ ಭರವಸೆ ನೀಡಿದರು. ದೂರವಾಣಿ ಮೂಲಕ ಟೋಲ್ ಸಂಗ್ರಹ ಕೇಂದ್ರದ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.