ಅಂಗನವಾಡಿ
ಬಳ್ಳಾರಿ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ನಿವೇಶನಗಳ ಕೊರತೆ ತೀವ್ರವಾಗಿ ಕಾಡುತ್ತಿದ್ದು, ಜಾಗ ಒದಗಿಸಿಕೊಡುವಂತೆ ಜಿಲ್ಲಾ ಪಂಚಾಯಿತಿಯ ಸಿಇಒಗಳಿಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಪತ್ರ ಬರೆದಿದೆ.
ಅಧಿಕೃತ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 69,922 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 47,450 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿದ್ದು, ಇನ್ನುಳಿದ 13,066 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಹಾಗೂ 9,406 ಕೇಂದ್ರಗಳು ಇತರೆ ಸರ್ಕಾರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಬಳ್ಳಾರಿ ಜಿಲ್ಲೆಯಲ್ಲಿ 1,358 ಅಂಗನವಾಡಿಗಳಿದ್ದು, ಇದರಲ್ಲಿ 881 ಸ್ವಂತ ಕಟ್ಟಡದಲ್ಲಿವೆ. 103 ಕೇಂದ್ರಗಳು ಸರ್ಕಾರಿ ಶಾಲೆ ಸೇರಿದಂತೆ ಇತರ ಕಟ್ಟಡಗಳಲ್ಲಿವೆ. ಇನ್ನುಳಿದಂತೆ 374 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಇವೆ.
ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ಮಾಸಿಕ ಬಾಡಿಗೆ, ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳು ಕಾಡುತ್ತಿದೆ. ಈ ಮಧ್ಯೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ 5,000 ಕೇಂದ್ರಗಳಲ್ಲಿ ಈ ವರ್ಷ ದ್ವಿಭಾಷೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್.ಕೆ.ಜಿ)ಗಳನ್ನು ಆರಂಭಿಸಲು ನಿರ್ಧರಿಸಿದೆ. ಬಳ್ಳಾರಿ ಜಿಲ್ಲೆಯ 75 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಬಾಡಿಗೆ ಸ್ಥಳದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಹೊಂದಿಸುವ ಕಾರ್ಯಕ್ಕೆ ಇಲಾಖೆಯು ವೇಗ ನೀಡಿದೆ.
ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯದರ್ಶಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪತ್ರ ಬರೆದಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿಗಳ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳ ನಿರ್ದಿಷ್ಟ ಸಂಖ್ಯೆಯನ್ನು ನೀಡಿದೆ. ಈ ಪತ್ರ ಆಧರಿಸಿ ಪಾಲಿಕೆ, ನಗರಸಭೆ, ಪೌರಾಯುಕ್ತರು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಪತ್ರ ಬರೆದಿರುವ ಜಿಲ್ಲಾ ಪಂಚಾಯಿತಿಯ ಸಿಇಒ ನಿವೇಶನ ಹುಡುಕುವಂತೆ ಸೂಚನೆ ನೀಡಿದ್ದಾರೆ.
202 ನಿವೇಶನ ಅಗತ್ಯ: ಬಳ್ಳಾರಿ ಜಿಲ್ಲೆಯ ನಗರ ಪ್ರದೇಶಗಳಲ್ಲಿ 155 ಮತ್ತು ಗ್ರಾಮೀಣ ಭಾಗದ 47 ಸೇರಿದಂತೆ ಒಟ್ಟು 202 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ನಗರ, ಪಟ್ಟಣ ಪ್ರದೇಶದಲ್ಲಿ ನಿವೇಶನಗಳನ್ನು ಹೊಂದಿಸುವುದು ಕಷ್ಟ. ನಗರ ಪ್ರದೇಶಗಳಲ್ಲಿ ಜಾಗ ಲಭ್ಯವಿಲ್ಲ. ಇದು ಸಮಸ್ಯೆಯಾಗಿ ಪರಿಣಮಿಸಿದೆ ಎನ್ನುತ್ತಾರೆ ಅಧಿಕಾರಿಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.