ಹರಪನಹಳ್ಳಿ: ‘ಗುರುಕುಲ ಪರಂಪರೆ ಮಠಗಳು ಲೋಕ ಕಲ್ಯಾಣಕ್ಕೆ ಶ್ರಮಿಸುತ್ತವೆ’ ಎಂದು ರಾಮಘಟ್ಟ ಪುರವರ್ಗ ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ರಾಮಘಟ್ಟ ಗ್ರಾಮದಲ್ಲಿ ಭಾನುವಾರ ಜನಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಮಳೆ ಸಮೃದ್ಧವಾಗಿ ಆಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕು’ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಮಠದೊಂದಿಗಿನ ಒಡನಾಟ ಸ್ಮರಿಸಿದರು. ಗ್ರಾಮಸ್ಥರು ಅಂಗನವಾಡಿ ಕೇಂದ್ರ ನಿರ್ಮಾಣ, ಪ್ರೌಢಶಾಲೆಗೆ ಕಾಂಪೌಂಡ್, ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಡೊಳ್ಳು, ಸಮ್ಮಾಳ, ನಂದಿಕೋಲು ಮಜಲುಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ಆವರಗೊಳ್ಳದ ಓಂಕಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಮಾತನಾಡಿದರು. ರೂಪಾ ಎಂ.ಎಸ್.ದಿವಾಕರ್, ತಹಶೀಲ್ದಾರ್ ಗಿರೀಶ್ ಬಾಬು, ಆರ್. ಐ. ನನ್ಯಾ ಸಾಹೇಬ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಂ.ಅಜ್ಜಯ್ಯ, ಶಿವಕುಮಾರ್ ಸ್ವಾಮಿ, ಭೋಗೇಶ್ವರ ಸ್ವಾಮಿ, ನಿಚ್ಚವ್ವನಹಳ್ಳಿ ಹಾಲಸ್ವಾಮಿ, ಫಣಿಯಾಪುರದ ಲಿಂಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.