
ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮೇಲೆ ನಡೆದ ದಾಳಿಯನ್ನು ಖಂಡಿಸಿ ಇದೇ 17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
‘ಈ ಸಮಾವೇಶದ ಮೂಲಕ ಕಾಂಗ್ರೆಸ್ ಸರ್ಕಾರದ ಗೂಂಡಾ ಸಂಸ್ಕೃತಿಗೆ ತಕ್ಕ ಪಾಠ ಕಲಿಸಲಾಗುವುದು. ಈ ಹೋರಾಟದಲ್ಲಿ ರಾಜಿ ಇಲ್ಲ, ನ್ಯಾಯಕ್ಕಾಗಿ ನಮ್ಮ ಪ್ರತಿಭಟನೆ ನಿರಂತರವಾಗಿರಲಿದೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಬಳ್ಳಾರಿಯಲ್ಲಿ ಶಾಸಕ ಭರತ್ ರೆಡ್ಡಿ ಅವರ ಸಮ್ಮುಖದಲ್ಲೇ ಅಮಾಯಕ ಯುವಕ ರಾಜಶೇಖರ ಅವರ ಹತ್ಯೆಯಾಗಿದ್ದರೂ, ಹಂತಕರ ವಿರುದ್ಧ ಕ್ರಮ ತೆಗೆದುಕೊಳ್ಳದೇ ರಾಜಾತಿಥ್ಯ ನೀಡುತ್ತಾ ರಕ್ಷಣೆಗೆ ನಿಂತಿರುವುದು ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ. ಘಟನೆ ನಡೆದು 12 ದಿನಗಳು ಕಳೆದರೂ ಶಾಸಕನ ಮೇಲೆ ಕೊಲೆ ಮೊಕದ್ದಮೆ ದಾಖಲಿಸಲು ಸರ್ಕಾರ ಮೀನ–ಮೇಷ ಎಣಿಸುತ್ತಿದೆ. ಸಿದ್ದರಾಮಯ್ಯ ಅವರ ದ್ವಂದ್ವ ನೀತಿಯು ತನಿಖಾ ವ್ಯವಸ್ಥೆಯನ್ನೇ ಅಪಹಾಸಕ್ಕೀಡು ಮಾಡಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.