ADVERTISEMENT

‘ಗ್ಯಾರಂಟಿ ಯೋಜನೆ ಜನರಿಗೆ ವರದಾನ’

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 16:19 IST
Last Updated 4 ಮಾರ್ಚ್ 2024, 16:19 IST
ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ಮಳಿಗೆಯನ್ನು ಶಾಸಕ ಎಚ್.ಆರ್.ಗವಿಯಪ್ಪ ಉದ್ಘಾಟಿಸಿದರು
ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ಮಳಿಗೆಯನ್ನು ಶಾಸಕ ಎಚ್.ಆರ್.ಗವಿಯಪ್ಪ ಉದ್ಘಾಟಿಸಿದರು   

ಹೊಸಪೇಟೆ(ವಿಜಯನಗರ): ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಇಲಾಖೆಯಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ವಸ್ತು ಪ್ರದರ್ಶನ ಮಳಿಗೆಯನ್ನು ಸೋಮವಾರ ಶಾಸಕ ಎಚ್.ಆರ್.ಗವಿಯಪ್ಪ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರವು ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಅಲ್ಲದೆ ಗೃಹಲಕ್ಷ್ಮಿ ಯೋಜನೆಯಿಂದಾಗಿ ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ ಸಿಗುತ್ತಿದೆ. ಜೊತೆಗೆ ಗೃಹಜ್ಯೋತಿ ಯೋಜನೆ ಮತ್ತು ಯುವನಿಧಿ ಯೋಜನೆಯಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದರು.

ಶಕ್ತಿ ಯೋಜನೆ ಜಾರಿಯಿಂದಾಗಿ ಜಿಲ್ಲೆಯ ಸಾರಿಗೆ ಇಲಾಖೆಯೊಂದಕ್ಕೆ ಪ್ರತಿ ತಿಂಗಳು ಕೋಟಿಗಟ್ಟಲೇ ಆದಾಯ ಬರುತ್ತಿದೆ. ಸಂಸ್ಥೆ ಮೊದಲಿಗಿಂತ ಹೆಚ್ಚಿನ ರೀತಿಯಲ್ಲಿ ಬಲವರ್ಧನೆಯಾಗಿದೆ ಎಂದು ಇಲಾಖೆಯ ಅಧಿಕಾರಿಗಳೇ ತಿಳಿಸಿದ್ದು, ಈ ಯೋಜನೆ ಜನಮೆಚ್ಚುಗೆ ಗಳಿಸಿದೆ ಎಂದರು.

ADVERTISEMENT

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್.ಜಗದೀಶ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕೆ.ರಾಮಾಂಜನೇಯ, ಮುಖಂಡರಾದ ಬಸವರಾಜ ಎಸ್.ಪಿ., ಕಾರಪುಡಿ ಮಹೇಶ, ಮುನ್ನಿ, ಯೋಗಲಕ್ಷ್ಮಿ, ಬಡಾವಲಿ, ರಾಮನಗೌಡ್ರ, ಅಂಜನಪ್ಪ, ಹುಲಗಪ್ಪ, ಗಿಂಜಿ ಮಂಜುನಾಥ ಇದ್ದರು.

ವೀಕ್ಷಣೆಗೆ ಅವಕಾಶ

ಅರ್ಹ ಫಲಾನುಭವಿಗಳು ಸರ್ಕಾರದ ವಿವಿಧ ಯೋಜನೆಗಳಿಂದ ವಂಚಿತರಾಗದಂತೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಾರ್ತಾ ಇಲಾಖೆಯಿಂದ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆ ಹಾಕಲಾಗಿದೆ. ಯೋಜನೆಗಳ ಮಾಹಿತಿಯ ವಸ್ತು ಪ್ರದರ್ಶನದ ವೀಕ್ಷಣೆಯು ಉಚಿತವಾಗಿದ್ದು, ಬಸ್ ನಿಲ್ದಾಣಕ್ಕೆ ಬರುವವರು ಹಾಗೂ ಸಾರ್ವಜನಿಕರು ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.