ADVERTISEMENT

ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿ

ಸಚಿವ ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ಖಡಕ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2019, 13:49 IST
Last Updated 2 ನವೆಂಬರ್ 2019, 13:49 IST
ಹೊಸಪೇಟೆಯಲ್ಲಿ ಶನಿವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ ಮಾತನಾಡಿದರು
ಹೊಸಪೇಟೆಯಲ್ಲಿ ಶನಿವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ ಮಾತನಾಡಿದರು   

ಹೊಸಪೇಟೆ: ‘ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತುಂಗಭದ್ರಾ ನದಿ ತಟದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ನಗರದಲ್ಲಿ ಹಾವೇರಿ, ಬಳ್ಳಾರಿ ಜಿಲ್ಲೆಗಳ ಮರಳು ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಬರಬೇಕಾದ ಆದಾಯ ಸೋರಿಕೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.

‘ಮನೆ ಕೆಲಸಗಳಿಗೆ ಅಲ್ಪ ಸ್ವಲ್ಪ ಮರಳು ತೆಗೆದುಕೊಂಡು ಹೋಗುವವರ ಮೇಲೆ ವಿನಾಕಾರಣ ಪ್ರಕರಣ ಹೂಡಿ ಕಿರುಕುಳ ನೀಡಬಾರದು. ಸ್ವಲ್ಪ ಉದಾರತೆ ತೋರಿಸಬೇಕು. ಅಕ್ರಮಕ್ಕೆ ಸಹಕರಿಸುವ ಜಮೀನು ಮಾಲೀಕರಿಗೂ ನೋಟಿಸ್‌ ಕೊಡಬೇಕು’ ಎಂದು ನಿರ್ದೇಶಿಸಿದರು.

ADVERTISEMENT

‘ಬಳ್ಳಾರಿ, ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಸಾಕಷ್ಟು ಮರಳು ಇದೆ. ಅದನ್ನು ಎಲ್ಲಿ ಕೊರತೆ ಇದೆಯೋ ಅಂತಹ ಜಿಲ್ಲೆಗಳಿಗೆ ಪೂರೈಸಬೇಕು. ಕೈಗೆಟಕುವ ದರದಲ್ಲಿ ಜನರಿಗೆ ಸಿಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಯೋಜನೆ ರೂಪಿಸಬೇಕು’ ಎಂದು ಹೇಳಿದರು.

ಅಸಮಾಧಾನ:

ಮರಳಿನ ಕರ ಸಂಗ್ರಹದಲ್ಲಿ ಹಾವೇರಿ ಸಾಧಾರಣ ಪ್ರಗತಿ ಸಾಧಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಬರುವ ದಿನಗಳಲ್ಲಿ ನಿಗದಿತ ಗುರಿ ಸಾಧಿಸಲು ಸೂಚಿಸಿದರು.

ಅಕ್ರಮ ಮರಳು ತಡೆಯಲು ಗಣಿ ಇಲಾಖೆ, ಕಂದಾಯ, ಪೊಲೀಸ್, ಆರ್‌.ಟಿ.ಒ,, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಮಹಾವೀರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.