ADVERTISEMENT

ಸುಗ್ರೀವಾಜ್ಞೆ ವಿರೋಧಿಸಿ ಸಮಾವೇಶ: ರೈತ ಸಂಘದ ಜೀರ್ ಕಾರ್ತಿಕ್

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 2:18 IST
Last Updated 8 ಸೆಪ್ಟೆಂಬರ್ 2020, 2:18 IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಂಪ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೀರ್ ಕಾರ್ತಿಕ್ ಮಾತನಾಡಿದರು
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಂಪ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೀರ್ ಕಾರ್ತಿಕ್ ಮಾತನಾಡಿದರು   

ಕಂಪ್ಲಿ: ‘ರೈತ ವಿರೋಧಿ ಸುಗ್ರೀವಾಜ್ಞೆಗಳ ಕುರಿತು ಸೆ. 11ರಂದು ಇಲ್ಲಿಯ ಎಪಿಎಂಸಿ ಆವರಣದಲ್ಲಿ ವಿಚಾರ ಸಂಕಿರಣ ಮತ್ತು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಚಂದ್ರಶೇಖರ್ ಬಣ) ರಾಜ್ಯ ಪ್ರಧಾನ ಕಾರ್ಯದರ್ಶಿ ಜೀರ್ ಕಾರ್ತಿಕ್ ತಿಳಿಸಿದರು.

ಘಟಕ ಪದಾಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಸಮಾವೇಶದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ’ ಎಂದರು.

ADVERTISEMENT

‘ಕಂಪ್ಲಿ ಸಕ್ಕರೆ ಕಾರ್ಖಾನೆಯ 176 ಎಕರೆ ಭೂಮಿಯನ್ನು ಸರ್ಕಾರ ಖಾಸಗಿಯವರಿಗೆ ಪರಭಾರೆ ಮಾಡಲು ನಿರ್ಧರಿಸಿದ್ದು, ಇದರ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು. ಆ ಭೂಮಿಯಲ್ಲಿ ಸರ್ಕಾರಿ ಇಲ್ಲವೇ ಸಹಕಾರಿ ವಲಯದ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ನಾರಾಯಣರೆಡ್ಡಿ ಮಾತನಾಡಿ, ‘ಜಿಲ್ಲೆಯಲ್ಲಿ ಶಾಶ್ವತ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ರೈತರ ಪಂಪ್‍ಸೆಟ್‍ಗಳಿಗೆ 7ಗಂಟೆ ಬದಲಿಗೆ 12ಗಂಟೆ ತ್ರಿ ಫೇಸ್ ಉಚಿತ ವಿದ್ಯುತ್ ಒದಗಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಕಾಶೀಂಸಾಬ್, ನಗರ ಅಧ್ಯಕ್ಷ ಕೊಟ್ಟೂರು ರಮೇಶ್, ಮುಖಂಡರಾದ ಚೆಲ್ಲಾ ವೆಂಕಟನಾಯ್ಡು, ವಿ.ಟಿ. ನಾಗರಾಜ, ಬಿ.ವಿ. ಗೌಡ, ಕಾಗಿ ಈರಣ್ಣ, ಮುರಾರಿ, ಬಿ.ಕೆ. ದೇವೇಂದ್ರ, ಸುದರ್ಶನ, ಕುರಿ ವೀರೇಶ್, ಬಿ.ಎಂ. ಮಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.