
ಕೂಡ್ಲಿಗಿ: ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಬೋಧನೆ ಮಾಡುವ ಮೂಲಕ ತಾಲ್ಲೂಕಿನ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೆಕು ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆ ಹಾಗೂ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಪ್ರಗತಿ ಪರಿಶೀಲನೆ ಹಾಗೂ ಜೆಸ್ಕಂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಪಬ್ಲಿಕ್ ಶಾಲೆಗಳು ಇರುವ ಕಡೆ ಹಾಸ್ಟೇಲ್ ನಿರ್ಮಾಣಕ್ಕೆ ಸರ್ಕಾರಿ ಜಾಗವನ್ನು ಗುರುತಿಸಬೇಕಾಗಿದೆ. ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳ ಜಾಗಗಳನ್ನು ಗ್ರಾಮ ಪಂಚಾಯ್ತಿಯಲ್ಲಿ 9/11 ಫಾರಂ ಇರುವಂತೆ ನೋಡಿಕೊಳ್ಳಬೇಕು. 1ರಿಂದ 6 ಹಾಗೂ 7ರಿಂದ 12ನೇ ತರಗತಿವರೆಗೆ ಉತ್ತಮ ಕ್ಯಾಂಪಸ್ ಗಳನ್ನು ನಿರ್ಮಾಣ ಮಾಡಲಾಗುವುದು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಿ ಉನ್ನತ ಮಟ್ಟದಲ್ಲಿ ಬೆಳೆಯುವಂತೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕ್ಷೇತ್ರದಲ್ಲಿರುವ ಹಳೆ ಕಂಬಗಳು ಹಾಗೂ ತಂತಿಗಳನ್ನು ಬದಲಾಯಿಸಲು ವಿಶೇಷ ಅನುದಾನ ತರಲಾಗಿದೆ. ಶಾಲೆಗಳ ಆವರಣದಲ್ಲಿರುವ ಎಲ್ಲಾ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಸ್ಥಳಾಂತರ ಮಾಡಲು ಮೊದಲ ಅಧ್ಯತೆ ನೀಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಮಾತನಾಡಿ, ಎಸ್‍ಎಸ್‍ಎಲ್ ಸಿಯ ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಸಾಧನೆ ಬಂದಿದೆ. ಇದನ್ನು ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಮುಂದಾಗಬೇಕು ಎಂದು ಮುಖ್ಯ ಶಿಕ್ಷಕರಿಗೆ ಹೇಳಿದರು.
ತಹಶೀಲ್ದಾರ್ ವಿ.ಕೆ. ನೇತ್ರಾವತಿ ಮಾತನಾಡಿ, ಸ್ಲಂ ಬೋರ್ಡಿನಿಂದ ನಿರ್ಮಾಣವಾಗುತ್ತಿರುವ ಮನೆಗಳ ಹಂಚಿಕೆಗೆ ಆರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ಸರ್ಕಾರಕ್ಕೆ ಕಟ್ಟಬೇಕಾದ ಮೊತ್ತವನ್ನು ಫಲಾನುಭವಿಗಳಿಂದ ಕಟ್ಟಿಸಿಕೊಳ್ಳಲಾಗುವುದು. ಯಾರು ಕೂಡ ಆಮಿಷಕ್ಕೆ ಒಳಗಾಗಿ ಯಾರಿಗೂ ಹಣ ನೀಡಬಾರದು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ ಪಾಲ್ಗೊಂಡಿದ್ದರು. ತಾಲ್ಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಜೆಸ್ಕಾಂ ಶಾಖಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.