ADVERTISEMENT

ಹಾಥರಸ್‌ ಪ್ರಕರಣ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 7:58 IST
Last Updated 16 ಅಕ್ಟೋಬರ್ 2020, 7:58 IST
ಹಾಥರಸ್‌ ಪ್ರಕರಣ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು
ಹಾಥರಸ್‌ ಪ್ರಕರಣ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು   

ಹೊಸಪೇಟೆ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದಿದೆ ಎನ್ನಲಾದ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಾದ್ಯಂತ ದಲಿತರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿವೆ. ಈ ಎರಡೂ ಸಮುದಾಯದವರನ್ನು ಹತ್ತಿಕ್ಕಲು ಉದ್ದೇಶಪೂರ್ವಕವಾಗಿಯೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ಅದಕ್ಕೆ ತಾಜಾ ನಿದರ್ಶನ ಹಾಥರಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಘಟನೆ. ಈ ಘಟನೆಯಿಂದ ದೇಶದ ಜನ ರೊಚ್ಚಿಗೆದ್ದಿದ್ದಾರೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಸಿಐಟಿಯು ಮುಖಂಡ ಆರ್‌. ಭಾಸ್ಕರ್‌ ರೆಡ್ಡಿ ಎಚ್ಚರಿಕೆ ನೀಡಿದರು.

ADVERTISEMENT

‘ಪ್ರಕರಣದ ತನಿಖೆ ಮುಗಿದು, ನ್ಯಾಯಾಲಯದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗುವವರೆಗೆ ಮೃತ ಯುವತಿಯ ಕುಟುಂಬದವರಿಗೆ ಸರ್ಕಾರ ರಕ್ಷಣೆ ನೀಡಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸು ಜಾರಿಗೆ ತರಬೇಕು. ದೌರ್ಜನ್ಯಕ್ಕೊಳಗಾದ ದಲಿತ ಕುಟುಂಬಗಳಿಗೆ ಕೃಷಿ ಭೂಮಿ, ಸರ್ಕಾರಿ ಉದ್ಯೋಗ ಮತ್ತು ವಾಸಕ್ಕೆ ಮನೆ ಕೊಡಬೇಕು. ಮೀಸಲಾತಿ, ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಜನವಾದಿ ಮಹಿಳಾ ಸಂಘಟನೆಯ ಕೆ. ನಾಗರತ್ನಮ್ಮ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಶಕುಂತಲ, ಈರಮ್ಮ, ಜ್ಯೋತಿ, ಸುನೀತಾ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್‌, ಭಾರತ ವಿದ್ಯಾರ್ಥಿ ಫೆಡರೇಶನ್‌ ತಾಲ್ಲೂಕು ಅಧ್ಯಕ್ಷ ಜೆ. ಶಿವುಕುಮಾರ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ಎಂ. ಗೋಪಾಲ್‌, ಹನುಮಂತಪ್ಪ, ಕುಲ್ಲಾಯಪ್ಪ, ಕವಿತಾ, ಶಿಲ್ಪಾ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.