
ಹೊಸಪೇಟೆ(ವಿಜಯನಗರ): ಜಿಲ್ಲೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್, ಅಬಕಾರಿ ಮತ್ತು ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ದೈಹಿಕವಾಗಿ ಮಾನಸಿಕವಾಗಿ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಇದರಿಂದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿ ಕುಟುಂಬ ಬೀದಿಗೆ ಬರಲಿದೆ. ಈ ನಿಟ್ಟಿನಲ್ಲಿ ಮದ್ಯ ಮಾದಕ ವಸ್ತುಗಳಿಂದ ದೂರವಿದ್ದು, ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳುವಂತೆ ಸಲಹೆ ನೀಡಿದರು.
ಶಾಲಾ ಮತ್ತು ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಅಥವಾ ಮಾದಕ ಪದಾರ್ಥಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಹಾಗೂ ಸೂಚನಾ ಫಲಕ ಅಳವಡಿಸಬೇಕು. ಮತ್ತು ವಿದ್ಯಾರ್ಥಿಗಳಿಗೆ ದುಷ್ಪರಿಣಾಮಗಳ ಬಗ್ಗೆ ಕಾರ್ಯಾಗಾರ ಆಯೋಜಿಸಿ ಜಾಗೃತಿ ಮೂಡಿಸಲು ತಿಳಿಸಿದರು.
ಜಿಲ್ಲೆಯಲ್ಲಿ ಔಷಧಿ ಅಂಗಡಿಗಳ ತಪಾಸಣೆ ನಡೆಸಬೇಕು. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಮಾಡುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲು ಸೂಚಿಸಿದರು. ಮಾದಕ ಮುಕ್ತ ಸಮಾಜ ನಿರ್ಮಾಣ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಅಬಕಾರಿ ಉಪ ಆಯುಕ್ತ ಮಾದೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.