ಸಂಡೂರು: ‘ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಕಾರಗೊಳಿಸಲು ಗ್ರಾಮಗಳನ್ನು ಸಂವೃದ್ಧವಾಗಿ ಅಭಿವೃದ್ಧಿಪಡಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮಗಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಬೇಕು’ ಎಂದು ಸಂಡೂರಿನ ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಹೇಳಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಶ್ರೀ ಭಗವಾನ ಬಿರ್ಸಾ ಮುಂಡಾರವರ 150ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯವಾಗಿ ಪರಿಶಿಷ್ಟ ಪಂಗಡ ಜನಾಂಗದ ಸರ್ವತೋಮುಖ ಅಭಿವೃದ್ಧಿಯ ಆಶಯವನ್ನು ಒಳಗೊಂಡಿದೆ. ಈ ಅಭಿಯಾನದ ಅನುಸಾರ ಸರ್ಕಾರದಿಂದ ಗ್ರಾಮಗಳಲ್ಲಿನ ಪರಿಶಿಷ್ಟ ಜನರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಂಗನಾಥ ಮುತಾಲಿಕ ಕಡೆಸಾಯಿ ಅವರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಅಭಿಯಾನವನ್ನು ಜಾರಿಗೊಳಿಸಲು ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ 20 ಗ್ರಾಮಗಳನ್ನು ಆಯ್ಕೆ ಮಾಡಿ ಸುಮಾರು 20ಜನ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಬಿಆರ್‍ಪಿ ಮಂಜುನಾಥ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.