ADVERTISEMENT

ಅತ್ತಿಬೆಲೆ: 45 ಲಕ್ಷ ವೆಚ್ಚದ ಕಾಮಗಾರಿ ಆರಂಭ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2012, 19:30 IST
Last Updated 20 ಫೆಬ್ರುವರಿ 2012, 19:30 IST

ಆನೇಕಲ್:  ಅತ್ತಿಬೆಲೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗಿದ್ದು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಕಾರದಿಂದ 45ಲಕ್ಷ ರೂ. ವೆಚ್ಚದ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋಪಾಲಕೃಷ್ಣ ನುಡಿದರು.

ಸೋಮವಾರ ತಾಲ್ಲೂಕಿನ ಅತ್ತಿಬೆಲೆಯಲ್ಲಿ 45ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ 7ನೇ ವಾರ್ಡ್‌ನಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ, ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಂಪೌಂಡ್ ಹಾಗೂ ಕೊಠಡಿ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಂಪೌಂಡ್ ನಿರ್ಮಾಣ, ಅತ್ತಿಬೆಲೆ ಸ್ಮಶಾನ ರಸ್ತೆಗೆ ಮೆಟ್ಲಿಂಗ್, 6ನೇ ವಾರ್ಡ್‌ನಲ್ಲಿ ರಸ್ತೆ ನಿರ್ಮಾಣ, ಪಶು ವೈದ್ಯಕೀಯ ಆಸ್ಪತ್ರೆಗೆ ಕಾಂಪೌಂಡ್ ಸೇರಿದಂತೆ ಅಂದಾಜು 45 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಅತ್ತಿಬೆಲೆಯಲ್ಲಿ ನಾಲ್ಕು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಪಟಾಪಟ್ ನಾಗರಾಜ್ ಮಾತನಾಡಿ, ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆಯ ಅವಶ್ಯಕತೆಯಿದ್ದು ಮಂಜೂರಾತಿಗೆ ಚುನಾಯಿತ ಪ್ರತಿನಿಧಿಗಳು ಶ್ರಮಿಸಬೇಕು ಎಂದರು.
 
ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಪ್ರಜಾ ವಿಮೋಚನಾ ಚಳವಳಿ (ಸಮತಾವಾದ) ಸಂಘಟನೆಯ ರಾಜ್ಯ ಉಪಾಧ್ಯಕ್ಷ ಛಲವಾದಿ ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಜೆಡಿಎಸ್ ತಾಲ್ಲೂಕು ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ (ಸೂರಿ), ಸದಸ್ಯರಾದ ವೇಣು, ಶ್ರೀಕಾಂತ್, ಯಲ್ಲಪ್ಪ, ಪ್ರದೀಪ್, ಕುಮಾರ್, ಪ್ರಭಾವತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಶಾಲಾ ಮುಖ್ಯ ಶಿಕ್ಷಕ ಮುನಿಹನುಮಯ್ಯ ಮತ್ತಿತರರು ಹಾಜರಿದ್ದರು.           

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.