ADVERTISEMENT

ಕೆರೆ ಒತ್ತುವರಿ ಆರೋಪ: ಕ್ರಮಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 6:15 IST
Last Updated 2 ಜುಲೈ 2013, 6:15 IST

ದೊಡ್ಡಬಳ್ಳಾಪುರ: `ತಾಲ್ಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ತಾಂಡದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಬದ್ಯಾನಾಯ್ಕ ಒತ್ತುವರಿ ಮಾಡಿಕೊಂಡಿರುವ ಕೆರೆ ಅಂಗಳದ ಜಮೀನನ್ನು ತೆರವುಗೊಳಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ' ಎಂದು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಸರ್ಕಲ್ ಇನ್‌ಸ್ಪೆಕ್ಟರ್ ಗೌತಮ್ ತಿಳಿಸಿದ್ದಾರೆ.

ಈ ಸಂಬಂಧ ದೂರವಾಣಿ ಮೂಲಕ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, ಬದ್ಯಾನಾಯ್ಕ ಒತ್ತುವರಿ ಮಾಡಿಕೊಂಡು ಕೆರೆ ಅಂಗಳದ ಜಮೀನಿನಲ್ಲಿ ಕೊರೆಸಿರುವ ಕೊಳವೆ ಬಾವಿಯನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.

`ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ. ಅವರ ಪ್ರತಿಕ್ರಿಯೆ ಬಂದ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಗ್ರಾಮಸ್ಥರು ಮಾಡಿರುವ ಆರೋಪ ಸಾಬೀತಾದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.

ಹೊಸಹಳ್ಳಿ ತಾಂಡ ಗ್ರಾಮದ 40 ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಅಂಗಳವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡು ನೀಲಗಿರಿ ಬೆಳೆಸಿದ್ದಾರೆ ಎಂದು ಇತ್ತೀಚೆಗೆ ಗ್ರಾಮಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.

`ಪ್ರಶ್ನಿಸಿದ್ದಕ್ಕೆ ಹಲ್ಲೆ'
`ಕೆರೆ ಅಂಗಳಕ್ಕೆ ಹೋಗಲು ದಾರಿ ಇಲ್ಲದಂತೆ ಒತ್ತುವರಿ ಮಾಡಿಕೊಳ್ಳಲಾಗಿದೆ. ಈ ಕುರಿತು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮನೆಗೆ ನುಗ್ಗಿ ಬದ್ಯಾನಾಯ್ಕ ಕಡೆಯವರು ಹಲ್ಲೆ ನಡೆಸಿದರು. ಈ ಬಗ್ಗೆ ಹೊಸಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಬದಲಾಗಿ ನಮ್ಮ ಮೇಲೆಯೇ ಪ್ರತಿದೂರು ದಾಖಲಿಸಿದ್ದಾರೆ. ಅನ್ಯಾಯದ ವಿರುದ್ಧ ಪ್ರಶ್ನೆ ಮಾಡುವುದೇ ತಪ್ಪು ಎನ್ನುವಂತಾಗಿದೆ.
-ಕುಮಾರ್‌ನಾಯ್ಕ, ಹೊಸಹಳ್ಳಿ ತಾಂಡ ನಿವಾಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.