ADVERTISEMENT

ಡಯಾಲಿಸಿಸ್ ಕೇಂದ್ರ ಸ್ಥಾಪನೆಗೆ ಯೋಜನೆ: ಕೈಜೋಡಿಸಲು ಶಾಸಕರ ಮನವಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 4:50 IST
Last Updated 5 ಜುಲೈ 2012, 4:50 IST

ದೊಡ್ಡಬಳ್ಳಾಪುರ: ನಗರದಲ್ಲಿ ಬಡ ಜನರಿಗೆ ಅನುಕೂಲವಾಗುವಂತೆ ಡಯಾಲಿಸಿಸ್ ಕೇಂದ್ರವನ್ನು ತೆರೆಯುವ ಕುರಿತು ಮಹಾತ್ವಾಕಾಂಕ್ಷೆಯ ಯೋಜನೆಯೊಂದನ್ನು ರೂಪಿಸಲಾಗಿದ್ದು ಇದಕ್ಕೆ ಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಸಕ ಜೆ.ನರಸಿಂಹಸ್ವಾಮಿ ಮನವಿ ಮಾಡಿದರು.

ನಗರದ ಲಯನ್ಸ್ ಭವನದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ನಡೆದ ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಲಯನ್ಸ್ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರಗಳು ಇದುವರೆವಿಗೂ ಲಕ್ಷಾಂತರ ಜನರಿಗೆ ದಾರಿ ದೀಪವಾಗಿವೆ. ಶರೀರಕ್ಕೆ ಪ್ರಧಾನವಾದ ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಬಡಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ನೆರವಾಗುತ್ತಿರುವ ಲಯನ್ಸ್ ಕ್ಲಬ್‌ನಂತಹ ಸೇವಾ ಸಂಸ್ಥೆಗಳ ಪಾತ್ರ ಶ್ಲಾಘನೀಯ ಎಂದರು.

ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಲಯನ್ಸ್ ಕ್ಲಬ್ ವತಿಯಿಂದ ಈಗಾಗಲೇ ನಿವೇಶನ ಪಡೆದುಕೊಂಡಿದ್ದು ಆಸ್ಪತ್ರೆಯ ನಿರ್ಮಾಣಕ್ಕೆ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಸುಬ್ರಹ್ಮಣ್ಯಂ ಅಧ್ಯಕ್ಷತೆ ವಹಿಸಿದ್ದರು. ಶಿಬಿರವನ್ನು ಎಂ.ಲಕ್ಷ್ಮಣರಾವ್ ಕಾಳೆ ಸ್ಮರಣಾರ್ಥ ವಕೀಲ ಎಲ್.ಮನೋಹರ್ ಕಾಳೆ ಮತ್ತು ಸಹೋದರರು ಪ್ರಾಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಸಿ.ನಾರಾಯಣ ಸ್ವಾಮಿ, ಟಿಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ದಯಾನಂದ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಆರ್.ಎಸ್.ಮಂಜುನಾಥ್, ಖಜಾಂಚಿ ಡಿ.ಕೆ.ಸೋಮಶೇಖರ್, ಲಯನೆಸ್ ಕ್ಲಬ್ ಅಧ್ಯಕ್ಷೆ ಮಂಜುಳಾಗುಪ್ತ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.