ADVERTISEMENT

ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾರಗದ್ದೆ ಸಜ್ಜು

​ಪ್ರಜಾವಾಣಿ ವಾರ್ತೆ
Published 22 ಜೂನ್ 2013, 13:07 IST
Last Updated 22 ಜೂನ್ 2013, 13:07 IST

ಆನೇಕಲ್:  ನಗರ ಜಿಲ್ಲಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲ್ಲೂಕಿನ ಹಾರಗದ್ದೆ ಸಂಪೂರ್ಣ ಸಜ್ಜಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಎಚ್.ಎಸ್.ಬಸವರಾಜು ತಿಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ನಡೆಯುವ ಸಮ್ಮಳನಕ್ಕೆ ಲೇಖಕಿ ಡಾ.ಕೆ.ಆರ್.ಸಂಧ್ಯಾರೆಡ್ಡಿ ಅವರು ಅಧ್ಯಕ್ಷರಾಗಿ ನಿಯೋಜಿತರಾಗಿದ್ದಾರೆ.
ಶನಿವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಜಿ.ಸಿ.ಪ್ರಕಾಶ್ ರಾಷ್ಟ್ರಧ್ವಜಾರೋಹಣ ಮಾಡುವರು. ಜಿಲ್ಲಾ ಕಸಾಪ ಅಧ್ಯಕ್ಷ ಟಿ.ತಿಮ್ಮೇಶ್ ಪರಿಷತ್‌ನ ಧ್ವಜಾರೋಹಣ ಮಾಡುವರು. ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಮತ್ತು ಆನೇಕಲ್ ಶಾಸಕ ಬಿ.ಶಿವಣ್ಣ ಚಾಲನೆ ನೀಡುವರು. ಜಿಗಣಿ ಎಪಿಸಿ ವೃತ್ತದಿಂದ ಹಾರಗದ್ದೆಯ ಸಮ್ಮೇಳನ ನಡೆಯುವ ಸ್ಥಳವಾದ ಭೈರವಿ ಕೆಂಪೇಗೌಡ ವೇದಿಕೆವರೆಗೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಲಾತಂಡಗಳ ವೈಭವದ ಮೆರವಣಿಗೆ ನಡೆಯಲಿದೆ.

ರಾಜಾಪುರ ಸಂಸ್ಥಾನ ಮಠದ ರಾಜೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸುವರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಮ್ಮೇಳನಕ್ಕೆ ಚಾಲನೆ ನೀಡುವರು. ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.

ಉದ್ಘಾಟನೆಯ ನಂತರ ಗೋಷ್ಠಿಗಳು ನಡೆಯುತ್ತದೆ. `ಬೆಂಗಳೂರು ಗಡಿಭಾಗದ ಐತಿಹಾಸಿಕ ಪರಂಪರೆ ಹಾಗೂ ಇತ್ತೀಚಿನ ಬೆಳವಣಿಗೆ' ಎಂಬ ಗೋಷ್ಠಿ ಸಂಶೋಧಕ ಡಾ.ದೇವರಕೊಂಡಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹನಿಗವನ ಗೋಷ್ಠಿಯು ಕವಿ ಜರಗನಹಳ್ಳಿ ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸುಗಮ ಸಂಗೀತ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಗಡಿಭಾಗದ ಸಾಮಾಜಿಕ ಮತ್ತು ಜನಪರ ಹೋರಾಟಗಾರರಿಗೆ ಗೌರವ ಸಮರ್ಪಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.