ದೊಡ್ಡಬಳ್ಳಾಪುರ: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಲಿತ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತಪರ ಹಾಗೂ ರೈತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಐವರು ದಲಿತ ಸಂಶೋಧನಾ ವಿದ್ಯಾರ್ಥಿಗಳನ್ನು ಹೊರ ಹಾಕಲಾಗಿತ್ತು. ಬಿಜೆಪಿ, ಆರ್‌ಎಸ್‌ಎಸ್ ಮತ್ತು ಎಬಿವಿಪಿಗಳ ಒತ್ತಾಯಕ್ಕೆ ಮಣಿದು ದಲಿತ ವಿದ್ಯಾರ್ಥಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿತ್ತು. ಇದಕ್ಕೆ ನೊಂದ ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜು ಸಣ್ಣಕ್ಕಿ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ರಾಜ್ಯ ರೈತ ಸಂಘ ಎಂ.ಡಿ.ಎನ್ ಬಣದ ಅಧ್ಯಕ್ಷ ಡಾ.ಶ್ರೀನಿವಾಸ್, ರೈತ ಶಕ್ತಿಯ ಅಧ್ಯಕ್ಷ ಹೊನ್ನಾಘಟ್ಟ ಮಹೇಶ್, ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಇದ್ದರು.
ವಿಜಯಪುರ ವರದಿ
ದಲಿತ ವಿದ್ಯಾರ್ಥಿ ಸಾವು: ಕ್ರಮಕ್ಕೆ ಆಗ್ರಹ ಸಾಮಾಜಿಕ ಅಸಮಾನತೆಯನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದ್ದ ವಿಶ್ವವಿದ್ಯಾಲಯವೇ ದಲಿತ ವಿರೋಧಿ ನೀತಿ ಅನುಸರಿಸಿ, ದಲಿತ ವಿದ್ಯಾರ್ಥಿಯೋರ್ವನ ಸಾವಿಗೆ ಕಾರಣವಾಗಿರುವುದು ಅತ್ಯಂತ ಖಂಡನೀಯ ಎಂದು ದಲಿತ ಸಂಘರ್ಷ ಸೇನೆಯ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ವೇಣುಗೋಪಾಲ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಸಾವಿನ ಬಗ್ಗೆ ತನಿಖೆಯಾಗಿ, ಆತ್ಮಹತ್ಯೆಗೆ ಪ್ರೇರೇಪಿಸಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದರು.
ದಲಿತ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಅಧಿಕಾರಿಗಳ ಮೇಲೆ ಹಾಗೂ ಅವರ ಮೇಲೆ ಒತ್ತಡ ತಂಡ ರಾಜಕೀಯ ಮುಖಂಡರಗಳ ಮೇಲೆ ಶೀಘ್ರ ಕ್ರಮ ಜರುಗಿಸಬೇಕು ಎಂದರು. ದಲಿತ ಸಂಘರ್ಷ ಸೇನೆಯ ತಾಲ್ಲೂಕು ಉಪಾಧ್ಯಕ್ಷ ಚಿಕ್ಕನಹಳ್ಳಿ ಪಿಳ್ಳಪ್ಪ, ಗೊಲ್ಲಹಳ್ಳಿ ನರಸಿಂಹ ಮೂರ್ತಿ, ಕೊಮ್ಮಸಂದ್ರ ಮುನಿರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.