ADVERTISEMENT

6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2012, 19:30 IST
Last Updated 14 ಏಪ್ರಿಲ್ 2012, 19:30 IST

ದೊಡ್ಡಬಳ್ಳಾಪುರ: ನೀರಿನ ಸಮಸ್ಯೆ ತೀವ್ರವಾಗಿರುವ ತಾಲ್ಲೂಕಿನ ಆರು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಉಳಿದಂತೆ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಕೊರತೆ ಉಂಟಾಗಿರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸಲು ಹಣದ ಕೊರತೆ ಇಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವರದಿ ನೀಡಿದಂತೆ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ.
 
ಸಮಸ್ಯೆ ಕುರಿತು ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳಲೆಂದೇ ವಾರಕ್ಕೊಮ್ಮೆ ಸಭೆ ನಡೆಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಸಮಸ್ಯೆ ಬಾರದಂತೆ ವಿದ್ಯುತ್ ಸರಬರಾಜು ಹಾಗೂ ವಿದ್ಯುತ್ ಪರಿವರ್ತಕಗಳ ದುರಸ್ತಿಗೆ ಬೆಸ್ಕಾಂ ಸಿಬ್ಬಂದಿ ಸನ್ನದ್ಧರಾಗಿದ್ದಾರೆ ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ತಾ.ಪಂ. ಅಧ್ಯಕ್ಷೆ ಪ್ರಸನ್ನಕುಮಾರ್, ಉಪಾಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಇಇಒ ಎಚ್.ಎಂ.ದ್ಯಾಮಪ್ಪ ಇತರರು ಇದ್ದರು.

ಎತ್ತಿನಹೊಳೆಗೆ 400 ಕೋಟಿ ರೂಪಾಯಿ ಮೀಸಲು

ಎತ್ತಿಹೊಳೆ ನೀರಾವರಿ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ 400 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರವು ಕೂಡಲೇ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲು ಮುಂದಾಗಬೇಕು ಎಂದು ಶಾಸಕ ಜೆ.ನರಸಿಂಹಸ್ವಾಮಿ ಒತ್ತಾಯಿಸಿದರು.

ಮೂರು ದಿನಗಳ ಹಿಂದೆ ಕಸಬಾ ಹೋಬಳಿಯ ದರ್ಗಾ ಜೋಗಿಹಳ್ಳಿ ಗ್ರಾಮದಲ್ಲಿ 1,200 ಅಡಿಗಳವರೆಗೆ ಕೊಳವೆ ಬಾವಿ ಕೊರೆದಿದ್ದರೂ ನೀರು ದೊರೆತಿಲ್ಲ. ತಾಲ್ಲೂಕಿನ ಬಹುತೇಕ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ 800 ಅಡಿಗೆ ಕುಸಿದಿದೆ. ಈ ವರ್ಷ ಕೊರೆಸಲಾಗಿರುವ ಕೊಳವೆಬಾವಿಗಳ ಪೈಕಿ ಶೇ.40 ರಷ್ಟು ವಿಫಲವಾಗಿವೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಯೋಜನೆ ಆದಷ್ಟು ಬೇಗನೇ ಜಾರಿಯಾಗಬೇಕಿದೆ ಎಂದು ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.