ಆನೇಕಲ್: ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ವರ್ಗಾವಣೆಗೆ ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜುಲೈ 11ರಂದು ಪೊರಕೆ ಚಳವಳಿ ಮತ್ತು ಅರೆಬೆತ್ತಲೆ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ವಕೀಲ ಆನಂದ ಚಕ್ರವರ್ತಿ ತಿಳಿಸಿದರು.
ಅವರು ತಾಲ್ಲೂಕಿನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ಪ್ರತಿಭಟನೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಉಪವಿಭಾಗಾಧಿಕಾರಿ ಅಕ್ರಮ ಬಗ್ಗೆ ತನಿಖೆ ನಡೆಸಬೇಕು. ಈ ನಿಟ್ಟಿನಲ್ಲಿ ಜುಲೈ 11ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಶಿವಾಜಿ ವೃತ್ತದಿಂದ ತಾಲ್ಲೂಕು ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಪ್ರಮುಖ ಭಾಗಗಳಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಹಣವಂತರ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ರೈತರ ಕೆಲಸಗಳಿಗೆ ತೊಡಕಾಗಿದೆ ಎಂದು ಆರೋಪಿಸಿದರು.
ಮುಖಂಡರಾದ ರಾವಣ, ಚಿಕ್ಕನಾಗಮಂಗಲ ಗುರು, ಸುರೇಶ್ ಪೋತಾ, ವೆಂಕಟೇಶಮೂರ್ತಿ, ತ್ರಿಪುರ ಸುಂದರಿ, ಗುಡ್ಡಹಟ್ಟಿ ರಾಮಸ್ವಾಮಿ, ನಾಗರಾಜು, ಬಸವರಾಜು, ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.