ADVERTISEMENT

ವಿ.ವಿಯ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ

ಅಜೀಂ ಪ್ರೇಮ್‌ಜೀ ವಿ.ವಿ ಆವರಣಕ್ಕೆ ನುಗ್ಗಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 2:13 IST
Last Updated 25 ಫೆಬ್ರುವರಿ 2026, 2:13 IST
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ನಾಮಫಲಕಕ್ಕೆ ಎಬಿವಿಪಿ ಕಾರ್ಯಕರ್ತರು ಮಸಿ ಬಳಿದರು
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ನಾಮಫಲಕಕ್ಕೆ ಎಬಿವಿಪಿ ಕಾರ್ಯಕರ್ತರು ಮಸಿ ಬಳಿದರು   

ಸರ್ಜಾಪುರ (ಆನೇಕಲ್): ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. 

ಎಬಿವಿಪಿ ಪ್ರತಿಭಟನೆಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಲಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಶ್ವವಿದ್ಯಾಲಯದ ಆವರಣದಲ್ಲಿ 50ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ‘ಭಾರತ್‌ ಮಾತಾ ಕೀ ಜೈ’ ಎಂದು ಘೋಷಣೆಗಳನ್ನು ಕೂಗುತ್ತಾ ಒಳನುಗ್ಗಲು ಪ್ರಯತ್ನಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಅಖಿಲ ಭಾರತೀಯ ವಿದ್ಯಾರ್ಥಿ ಸಂಘವು (ಎಐಎಸ್‌ಎ) ದೇಶವಿರೋಧಿ ಚಿಂತನೆಯ ಕಾರ್ಯಕ್ರಮ ನಡೆಸುತ್ತಿದೆ. ಆ ಕಾರ್ಯಕ್ರಮಗಳಿಗೆ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ವೇದಿಕೆ ಕಲ್ಪಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

ವಿದ್ಯಾಸಂಸ್ಥೆಗಳು ಜ್ಞಾನಾರ್ಜನೆಯ ಕೇಂದ್ರ ಆಗಬೇಕು. ಆದರೆ, ಪ್ರತಿಷ್ಠಿತ ವಿದ್ಯಾಸಂಸ್ಥೆಗಳೇ ದೇಶವಿರೋಧಿ ಚಟುವಟಿಕೆಗಳ ತಾಣವಾಗಿ ನಿರ್ಮಾಣ ಆಗುತ್ತಿವೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. 

ಆನೇಕಲ್‌ ಪೊಲೀಸ್‌ ಉಪ ವಿಭಾಗದಿಂದ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ನಡೆ ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಸದಸ್ಯರು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು. ಎಬಿವಿಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ವಿಶ್ವವಿದ್ಯಾಲಯದ ಒಳಗೆ ನುಗ್ಗಲು ಪ್ರಯತ್ನಿಸಿದ ಎಬಿವಿಪಿ ಕಾರ್ಯಕರ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.