ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

ಸಮಂದೂರು ಗ್ರಾ.ಪಂ. ಗ್ರಾಮ ಸಭೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 3:00 IST
Last Updated 2 ಆಗಸ್ಟ್ 2021, 3:00 IST
ಆನೇಕಲ್ ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ನಡೆದ ಗ್ರಾಮ ಸಭೆಯನ್ನು ಅಧ್ಯಕ್ಷ ಎಸ್.ಆರ್. ಕೋದಂಡ ಉದ್ಘಾಟಿಸಿದರು
ಆನೇಕಲ್ ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ನಡೆದ ಗ್ರಾಮ ಸಭೆಯನ್ನು ಅಧ್ಯಕ್ಷ ಎಸ್.ಆರ್. ಕೋದಂಡ ಉದ್ಘಾಟಿಸಿದರು   

ಆನೇಕಲ್: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಸಲುವಾಗಿ 15 ಕೊಳವೆಬಾವಿಗಳನ್ನು ಕೊರೆಯಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯ 12 ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್‌.ಆರ್‌. ಕೋದಂಡ ತಿಳಿಸಿದರು.

ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಉಳಿದ ನಾಲ್ಕು ಗ್ರಾಮಗಳಲ್ಲಿ ಘಟಕ ಸ್ಥಾಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಕುಡಿಯುವ ನೀರು, ರಸ್ತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. 15ನೇ ಹಣಕಾಸು ಯೋಜನೆಯಡಿ ಮೂಲಸೌಲಭ್ಯ ಕಲ್ಪಿಸಲು ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಸಮಂದೂರು ಗ್ರಾಮ ಪಂಚಾಯಿತಿ ಗಡಿ ಗ್ರಾಮವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಬರುವ ವಾಹನಗಳು ಮತ್ತು ಸಾರ್ವಜನಿಕರ ಬಗ್ಗೆ ನಿಗಾವಹಿಸಲು ಲಾಕ್‌ಡೌನ್‌ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಪರಿಸ್ಥಿತಿಯನ್ನು ಗಮನಿಸಿ ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕೈಗಾರಿಕಾ ಪ್ರದೇಶಗಳಿಲ್ಲ. ಪಂಚಾಯಿತಿಯು ಬಹುತೇಕ ಹಸಿರು ವಲಯ ಪ್ರದೇಶದಲ್ಲಿದೆ. ಹಾಗಾಗಿ ಪಂಚಾಯಿತಿಯ ಆದಾಯ ಕಡಿಮೆಯಿದೆ. ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಶಾಸಕರು ಮತ್ತು ಸಂಸದರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಪ್ರಮೀಳಾ ಮುನಿರಾಜು, ಅಭಿವೃದ್ಧಿ ಅಧಿಕಾರಿ ಸುಬಾನ್‌ಖಾನ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಷ್ಪರಾಜು, ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.